ಬೆಂಗಳೂರು : ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಮೈತ್ರಿ ಪಕ್ಷಗಳು ಮೈಸೂರು ಚಲೋ ಪಾದಯಾತ್ರೆ ಯಶಸ್ವಿಯಾಗಿ ಮುಗಿಸಿದವು. ಆದರೆ ಪಾದಯಾತ್ರೆಯಲ್ಲಿ ಶಾಸಕರಾದ ಬಸನಗೌಡ ಪಾಟೀಲ್ ಯತ್ನಾಳ್, ರಮೇಶ್ ಜಾರಕಿಹೊಳಿ ಭಾಗವಹಿಸಿರಲಿಲ್ಲ. ಹೀಗಾಗಿ ಬಿಜೆಪಿಯಲ್ಲಿ ಭಿನ್ನಮತ ಸ್ಪೋಟಗೊಂಡಿತ್ತು. ಇದೀಗ ಚನ್ನಪಟ್ಟಣ ಉಪಚುನಾವಣೆಯಲ್ಲಿ ಮೈತ್ರಿ ಪಕ್ಷ ಟಿಕೆಟ್ ನೀಡದಿದ್ದರೆ, ಸ್ವತಂತ್ರವಾಗಿ ಸ್ಪರ್ಧಿಸಬಹುದಾಗಿ ಸಿಪಿ ಯೋಗೇಶ್ವರ್ ಹೊಸ ಬಾಂಬ್ ಸಿಡಿಸಿದ್ದಾರೆ.
ಹೌದು ಹೈಕಮಾಂಡ್ ಬುಲಾವ್ ಹಿನ್ನೆಲೆ ಇಂದು ದೆಹಲಿಗೆ ತೆರಳುವ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಸಿಪಿ ಯೋಗೇಶ್ವರ್, ನಾನು ಚನ್ನಪಟ್ಟಣ ಕ್ಷೇತ್ರದ ಪ್ರಬಲ ಆಕಾಂಕ್ಷಿಯಾಗಿದ್ದೇನೆ. ಎನ್ಡಿಎ ಅಭ್ಯರ್ಥಿಯಾಗಿ ಕಣಕ್ಕಿಳಿಯಬೇಕು ಎನ್ನುವ ಆಸೆ ಇದೆ. ಒಂದು ವೇಳೆ ಅದು ಸಾಧ್ಯ ವಾಗಿಲ್ಲ ಅಂದರೆ ಸ್ವತಂತ್ರವಾಗಿ ಸ್ಪರ್ಧಿಸಲು ನಿರ್ಧರಿಸಿದ್ದೇನೆ ಎಂದು ಘೋಷಿಸಿದರು.
ನಾನು ಚನ್ನಪಟ್ಟಣ ಕ್ಷೇತ್ರದ ಪ್ರಬಲ ಆಕಾಂಕ್ಷಿಯಾಗಿದ್ದೇನೆ. ಅಲ್ಲಿ ಸ್ಪರ್ಧಿಸುವಂತೆ ಜನರು ಕೂಡ ಒತ್ತಡ ಹಾಕುತ್ತಿದ್ದಾರೆ. ನಾವೆಲ್ಲರೂ ಸಮಾನ ಮನಸ್ಕರು ಸಭೆ ಸೇರಿದ್ದೇವೆ. ಯಾವುದೇ ಕಾರಣಕ್ಕೂ ಚನ್ನಪಟ್ಟಣ ಕ್ಷೇತ್ರವನ್ನು ಕಾಂಗ್ರೆಸ್ಗೆ ಬಿಟ್ಟು ಕೊಡಬಾರದು. ಆ ಕ್ಷೇತ್ರವನ್ನು ಎನ್ಡಿಎ ವಶಕ್ಕೆ ತಗೊಳ್ಳಬೇಕು ಎಂದು ನಿರ್ಣಯಿಸಿದ್ದೇವೆ. ಇದೇ ಕಾರಣಕ್ಕೆ ನಾನು ಎನ್ಡಿಎ ಅಭ್ಯರ್ಥಿಯಾಗಿ ಕಣಕ್ಕಿಳಿಯುವ ಮನಸ್ಸು ಮಾಡಿದ್ದೇನೆ. ಅದಕ್ಕಾಗಿ ಇಂದು ದಿಲ್ಲಿಗೆ ತೆರಳುತ್ತಿದ್ದೇನೆ. ಅಲ್ಲಿ ವರಿಷ್ಠರನ್ನು ಭೇಟಿಯಾಗಿ ಚರ್ಚೆ ನಡೆಸುತ್ತೇನೆ ಎಂದರು.
ಎನ್ಡಿಎ ಅಭ್ಯರ್ಥಿಯಾಗಿ ಕಣಕ್ಕಿಳಿಯಬೇಕು ಎನ್ನುವ ಆಸೆ ಇದೆ. ಒಂದುವೇಳೆ ಅದು ಸಾಧ್ಯ ವಾಗಿಲ್ಲ ಅಂದರೆ ಸ್ವತಂತ್ರವಾಗಿ ಸ್ಪರ್ಧಿಸಲು ನಿರ್ಧರಿಸಿದ್ದೇನೆ. ಈಗಾಗಲೇ ನಮ್ಮ ಕ್ಷೇತ್ರದ ಜನರು ಹಲವು ಬಾರಿ ಸ್ವತಂತ್ರವಾಗಿ ನಿಂತರೂ ನನ್ನನ್ನು ಗೆಲ್ಲಿಸಿದ್ದಾರೆ. ಮೈತ್ರಿ ಅಭ್ಯರ್ಥಿಯಾಗಲು ಸಾಧ್ಯವಿಲ್ಲ ಎಂದಾದರೆ ಸ್ವತಂತ್ರವಾಗಿ ಸ್ಪರ್ಧಿಸುತ್ತೇನೆ ಹೊರತು ಕಾಂಗ್ರೆಸ್ಗೆ ಸೇರಲ್ಲ. ಇದುವರೆಗೆ ನನ್ನನ್ನು ಯಾವುದೇ ಕಾಂಗ್ರೆಸ್ ನಾಯಕರು ಸಂಪರ್ಕಿಸಿಲ್ಲ ಎಂದು ಯೋಗೇಶ್ವರ್ ಸ್ಪಷ್ಟಪಡಿಸಿದರು.