ಬೆಂಗಳೂರು : ಅನಾರೋಗ್ಯದಿಂದ ಬಳಲುತ್ತಿದ್ದ ಚಾಮರಾಜನಗರ ಬಿಜೆಪಿ ಸಂಸದ ವಿ.ಶ್ರೀನಿವಾಸ ಪ್ರಸಾದ್ ಅವರು ನಿಧನರಾಗಿದ್ದಾರೆ.
ಶ್ರೀನಿವಾಸ್ ಪ್ರಸಾದ್ ಅವರನ್ನು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ನಿಧನರಾಗಿದ್ದಾರೆ.
ಶ್ರೀನಿವಾಸ್ ಪ್ರಸಾದ್ ಅವರು ಚಾಮರಾಜನಗರ ಕ್ಷೇತ್ರದಿಂದ ಆರು ಬಾರಿ ಸಂಸದರಾಗಿ, ನಂಜನಗೂಡು ಕ್ಷೇತ್ರದಿಂದ ಎರಡು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದರು.
ಅವರು ಮೂಲತಃ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ನಿಂದ ಬಂದವರು. 2013ರಲ್ಲಿ ನಂಜನಗೂಡಿನಿಂದ ಶಾಸಕರಾಗಿ ಆಯ್ಕೆಯಾಗಿದ್ದರು. ನಂತರ ಅವರು ಮತ್ತೆ ತಮ್ಮ ಪಕ್ಷವನ್ನು ಬದಲಾಯಿಸಿದರು ಮತ್ತು 24 ಡಿಸೆಂಬರ್ 2016 ರಂದು ಅಧಿಕೃತವಾಗಿ ಬಿಜೆಪಿಗೆ ಸೇರಿದರು. 2017ರಲ್ಲಿ ನಂಜನಗೂಡಿನಲ್ಲಿ ಕಾಂಗ್ರೆಸ್ ಅಭ್ಯರ್ಥಿ ವಿರುದ್ಧ ಸೋತಿದ್ದರು.
2008, 2013ರಲ್ಲಿ ನಂಜನಗೂಡು ವಿಧಾನಸಭೆ ಕ್ಷೇತ್ರದಿಂದ ಆಯ್ಕೆಯಾಗಿ 2013 ರಿಂದ 17ರ ವರೆಗೆ ಕಂದಾಯ ಸಚಿವರಾಗಿ ಸೇವೆ ಸಲ್ಲಿಸಿದ್ದರು. 2017ರಲ್ಲಿ ಸಚಿವ ಸ್ಥಾನದಿಂದ ಸಿದ್ದರಾಮಯ್ಯ ಕೈ ಬಿಟ್ಟಿದ್ದಕ್ಕೆ ಕಾಂಗ್ರೆಸ್ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. 2017ರಲ್ಲಿ ಬಿಜೆಪಿ ಸೇರ್ಪಡೆಯಾಗಿ ಉಪಚುನಾವಣೆಯಲ್ಲಿ ಸೋಲು ಕಂಡಿದ್ದರು. 2019ರಲ್ಲಿ ಚಾಮರಾಜನಗರ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಜಯಗಳಿಸಿದ್ದರು.
2013 ರಿಂದ 2016 ರವರೆಗೆ ಸಿದ್ದರಾಮಯ್ಯ ನೇತೃತ್ವದ ಕರ್ನಾಟಕ ಸರ್ಕಾರದಲ್ಲಿ ಕಂದಾಯ ಮತ್ತು ಮುಜರಾಯಿ ಸಚಿವರಾಗಿದ್ದರು. 1999-2004ರ ಅವಧಿಯಲ್ಲಿ ಅಟಲ್ ಬಿಹಾರಿ ವಾಜಪೇಯಿ ನೇತೃತ್ವದ ಭಾರತ ಸರ್ಕಾರದಲ್ಲಿ ಆಹಾರ ಮತ್ತು ಗ್ರಾಹಕ ವ್ಯವಹಾರಗಳ ಸಚಿವರಾಗಿದ್ದರು.