ಬೆಂಗಳೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ ( Chief Minister Siddaramaiah ) ಅವರು ಇಂದು ತಮ್ಮ ದಾಖಲೆಯ 16 ನೇ ರಾಜ್ಯ ಬಜೆಟ್-2025-26 ( Karnataka Budget 2025-26 ) ಅನ್ನು ಮಂಡಿಸುತ್ತಿದ್ದು, ಕೈಗಾರಿಕಾ ವಲಯದಲ್ಲಿ 20 ಲಕ್ಷ ಉದ್ಯೋಗ ಸೃಷ್ಟಿ ಮಾಡುವುದಾಗಿ ಸಿಎಂ ಸಿದ್ದರಾಮಯ್ಯ ಘೋಷಿಸಿದ್ದಾರೆ.
ವಿವಿಧ ಯೋಜನೆಗಳು, ಹೊಸ ಬಂಡವಾಳ ಆಕರ್ಷಿಸುವ ಮೂಲಕ 20 ಲಕ್ಷ ಉದ್ಯೋಗ ಸೃಷ್ಟಿಸುವ ಗುರಿ ಇದೆ ಎಂದು ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ.
ಕಲ್ಯಾಣ ಕರ್ನಾಟಕ ಭಾಗದಲ್ಲಿ 5267 ಶಿಕ್ಷಕರ ಹುದ್ದೆಗಳ ಭರ್ತಿಗೆ ಕ್ರಮ ಕೈಗೊಳ್ಳಲಾಗುವುದು, ತರ್ಕಬದ್ದಗೊಳಿಸಿ 5000 ಹುದ್ದೆಗಳನ್ನು ಭರ್ತಿ ಮಾಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಘೋಷಿಸಿದರು.
ಸರ್ಕಾರಿ ಪದವಿ ಪೂರ್ವ ಕಾಲೇಜುಗಳ ಅತಿಥಿ ಉಪನ್ಯಾಸಕರಿಗೆ ಪ್ರಸ್ತುತ ನೀಡಲಾಗುತ್ತಿರುವ ಗೌರವಧನವನ್ನು 2,000 ರೂ. ಹೆಚ್ಚಳ ಮಾಡಲಾಗುವುದು. ರಾಜ್ಯದ 37 ಲಕ್ಷ ಮಕ್ಕಳ ಆರೈಕೆ ಮತ್ತು ಕಲಿಕೆಯಲ್ಲಿ ಮಹತ್ತರ ಪಾತ್ರವಹಿಸುತ್ತಿರುವ ಅಂಗನವಾಡಿ ಕಾರ್ಯಕರ್ತರ ಗೌರವಧನ 1,000 ರೂ. ಹಾಗೂ ಸಹಾಯಕಿಯರ ಗೌರವಧನವನ್ನು 700 ರೂ.ಗೆ ಹೆಚ್ಚಳ ಮಾಡಲಾಗುವುದು ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.