ಬೆಂಗಳೂರು : ರಾಜ್ಯ ಕಾಂಗ್ರೆಸ್‌ನಲ್ಲಿನ ರಾಜಕೀಯ ಬೆಳವಣಿಗೆಗಳು ಮತ್ತು ನಾಯಕತ್ವ ಬದಲಾವಣೆಯ ಚರ್ಚೆಗಳು ಮತ್ತೆ ಮುನ್ನೆಲೆಗೆ ಬಂದಿದೆ. ಮಾಧ್ಯಮಗಳೊಂದಿಗೆ ಮಾತನಾಡಿದ ಕುಣಿಗಲ್ ಕಾಂಗ್ರೆಸ್ ಶಾಸಕ ಡಾ. ರಂಗನಾಥ್ ಡಿಸಿಎಂ ಡಿ.ಕೆ. ಶಿವಕುಮಾರ್ ಅವರಿಗೆ ಶೀಘ್ರದಲ್ಲೇ ಒಳ್ಳೆಯ ಸ್ಥಾನ ಸಿಗಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಈ ಮೂಲಕ ಸಿಎಂ ಸ್ಥಾನ ಬದಲಾವಣೆಯ ವದಂತಿಗಳಿಗೆ ಅವರು ಪರೋಕ್ಷವಾಗಿ ಪುಷ್ಟಿ ನೀಡಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ. ಶಿವಕುಮಾರ್ ನಡುವಿನ ಅಧಿಕಾರ ಹಂಚಿಕೆ ಒಪ್ಪಂದದ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಅಂತಹ ಒಂದು ಒಪ್ಪಂದವಾಗಿದೆ ಎಂಬ ವಿಚಾರ ಎಲ್ಲರ ತಲೆಯಲ್ಲೂ ಇದೆ. ಆದರೆ, ಆ ಒಪ್ಪಂದದ ಸ್ವರೂಪ ಏನು ಎಂಬುದನ್ನು ಹೈಕಮಾಂಡ್ ಸ್ಪಷ್ಟಪಡಿಸಬೇಕು. ಈ ಮೂಲಕ ಹೈಕಮಾಂಡ್ ಸದ್ಯ ಇರುವ ಗೊಂದಲವನ್ನು ಬಗೆಹರಿಸಬೇಕು. ಇದನ್ನು ನಾವಷ್ಟೇ ಅಲ್ಲ, ಎಲ್ಲರೂ ಹೇಳುತ್ತಿದ್ದಾರೆ ಎಂದು ಉತ್ತರಿಸಿದರು.
ನಾವು ನಮ್ಮ ಕೆಲಸವನ್ನು ಪ್ರಾಮಾಣಿಕವಾಗಿ ಮಾಡಬೇಕು, ಫಲಾಫಲಗಳನ್ನು ದೇವರಿಗೆ ಬಿಡಬೇಕು. ಅದೇ ರೀತಿ ನಮ್ಮ ಡಿ.ಕೆ. ಶಿವಕುಮಾರ್ ಸಾಹೇಬರು ಪಕ್ಷದ ಜವಾಬ್ದಾರಿಯನ್ನು ಹೊತ್ತು ನಿಷ್ಠೆಯಿಂದ ಕೆಲಸ ಮಾಡುತ್ತಿದ್ದಾರೆ. ಅವರಿಗೆ ಮುಂಬರುವ ದಿನಗಳಲ್ಲಿ ಒಳ್ಳೆಯ ಸ್ಥಾನ ಸಿಗಬೇಕು ಎನ್ನುವುದು ನಮ್ಮೆಲ್ಲರ ನಿರೀಕ್ಷೆಯಾಗಿದೆ. ಹೈಕಮಾಂಡ್ ಈ ಕುರಿತು ಸೂಕ್ತ ನಿರ್ಧಾರ ತೆಗೆದುಕೊಳ್ಳುತ್ತದೆ ಎಂಬ ವಿಶ್ವಾಸ ನಮಗಿದೆ ಎಂದು ರಂಗನಾಥ್ ಹೇಳಿದರು.
ಸಿದ್ದರಾಮಯ್ಯ ಅವರು ಪ್ರಸ್ತುತ ಒಳ್ಳೆಯ ಆಡಳಿತ ನೀಡುತ್ತಿದ್ದಾರೆ. ಆದರೆ, ಮುಂದಿನ ದಿನಗಳಲ್ಲಿ ಡಿ.ಕೆ. ಶಿವಕುಮಾರ್ ಅವರಿಗೂ ಮುಖ್ಯಮಂತ್ರಿ ಸ್ಥಾನ ಸಿಗಬೇಕು ಎನ್ನುವುದು ನಮ್ಮ ಆಸೆ. ಹೈಕಮಾಂಡ್ ಏನೇ ನಿರ್ಧಾರ ತಗೊಂಡರೂ ನಾವು ಅದಕ್ಕೆ ಬದ್ಧರಾಗಿರುತ್ತೇವೆ. ವರಿಷ್ಠರು ಸೂಕ್ತ ನಿರ್ಧಾರ ತಗೊಳ್ಳುತ್ತಾರೆ ಎಂಬ ವಿಶ್ವಾಸವಿದೆ. ಎಲ್ಲದಕ್ಕೂ ಕಾಲ ಬರಬೇಕು, ಕಾಲಾಯ ತಸ್ಮೈ ನಮಃ ಎಂದು ಅವರು ಮಾರ್ಮಿಕವಾಗಿ ನುಡಿದರು.








