ಬೆಂಗಳೂರು : ಬಿಜೆಪಿ ಅಧಿಕಾರ ಅವಧಿಯಲ್ಲಿ ನಡೆದಂತಹ ಹಗರಣಗಳು ಸೇರಿದಂತೆ ಒಟ್ಟು 26 ಹಗರಣಗಳ ಕುರಿತಂತೆ ತನಿಖೆ ನಡೆಸಿ ಶೀಘ್ರದಲ್ಲಿ ವರದಿ ಸಲ್ಲಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದ್ದಾರೆ. ಹಾಗಾಗಿ ಮೊನ್ನೆ ನಡೆದ ಕ್ಯಾಬಿನೆಟ್ ಸಭೆಯಲ್ಲಿ ಸಂಪುಟ ಉಪ ಸಮಿತಿ ರಚನೆ ಮಾಡಲಾಗಿದೆ ಎಂದು ಗೃಹ ಸಚಿವ ಜಿ.ಪರಮೇಶ್ವರ್ ತಿಳಿಸಿದರು.
ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬಿಜೆಪಿ ಸರ್ಕಾರದ ಅವಧಿಯಲ್ಲಿನ ಹಗರಣಗಳ ತನಿಖೆಯ ವಿಚಾರವಾಗಿ ನನ್ನ ನೇತೃತ್ವದಲ್ಲಿ ಸಂಪುಟ ಉಪ ಸಮಿತಿ ರಚನೆ ಮಾಡಲಾಗಿದೆ. ಸಮಿತಿಯಿಂದ 26 ಹಗರಣಗಳ ಮಾಹಿತಿಗಳನ್ನು ಸಂಗ್ರಹಿಸಲಾಗುತ್ತಿದ್ದು, ಆದಷ್ಟು ಬೇಗ ತನಿಖಾ ವರದಿ ಸಲ್ಲಿಸಲು ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ. ಸೂಚನೆ ಹಿನ್ನೆಲೆಯಲ್ಲಿ ಇದೀಗ ಸಂಪುಟ ಉಪಸಮಿತಿ ರಚನೆ ಮಾಡಲಾಗಿದೆ ಎಂದು ತಿಳಿಸಿದರು.
ಬಿಜೆಪಿ ಅಧಿಕಾರದ ಅವಧಿಯಲ್ಲಿ ಯಾವೆಲ್ಲ ಹಗರಣ ನಡದಿವೆಯೋ ಅವೆಲ್ಲ ಹಗರಣಗಳು ಹೊರಬರಲಿವೆ. ಎರಡು ತಿಂಗಳಿನ ಒಳಗಾಗಿ ವರದಿ ಕೊಡಬೇಕೆಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಸುಮಾರು 20 ರಿಂದ 25 ಹಗರಣಗಳ ಪಟ್ಟಿ ಮಾಡಿದ್ದೇವೆ. ದ್ವೇಷದ ರಾಜಕಾರಣ ಮಾಡುವುದು ಬೇಡ ಅಂತ ನಮ್ಮ ಉದ್ದೇಶವಾಗಿದೆ. ಆದರೆ ಬಿಜೆಪಿಯವರು ದ್ವೇಷದ ರಾಜಕಾರಣ ಮಾಡಿದರೆ ನಾವು ಮಾಡುತ್ತೇವೆ ಎಂದು ತಿಳಿಸಿದರು.