ಚಾಮರಾಜನಗರ : ಚಾಮರಾಜನಗರದಲ್ಲಿ ಘೋರವಾದ ಘಟನೆ ನಡೆದಿದ್ದು 14 ವರ್ಷದ ಬಾಲಕನೊಬ್ಬ ಮನೆಯಲ್ಲಿ ಯಾರು ಇಲ್ಲದ ವೇಳೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಾಮರಾಜನಗರ ಜಿಲ್ಲೆಯ ಯಳಂದೂರಿನ ಅರಗ ಗ್ರಾಮದಲ್ಲಿ ನಡೆದಿದೆ.
ಆತ್ಮಹತ್ಯೆಗೆ ಶರಣಾದ ಬಾಲಕನನ್ನು ಸುಭಾಷ್ ಎಂದು ತಿಳಿದುಬಂದಿದೆ.ಮೃತ ಸುಭಾಷ್ ಮರಿಯಾಲ ಗ್ರಾಮದ ಶಾಲೆಯಲ್ಲಿ 8ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದ ಎನ್ನಲಾಗಿದೆ.ಇಂದು ಮಧ್ಯಾಹ್ನದ ವೇಳೆ ತಮ್ಮ ಮನೆಯ ಕೊಠಡಿಯಲ್ಲಿ ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ.
ಘಟನೆ ಕುರಿತಂತೆ ಸುಭಾಶ್ ತಂದೆ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಶಾಲೆಗೆ ರಜೆ ಇದ್ದ ಹಿನ್ನೆಲೆಯಲ್ಲಿ ಈತ ತನ್ನ ಮನೆಗೆ ಬಂದಿದ್ದ ವೇಳೆ ಈ ಘಟನೆ ನಡೆದಿದೆ. ಓದಿನ ಬಗ್ಗೆ ನಿರಾಸಕ್ತಿ ಹೊಂದಿದ್ದ ಈತ ಮಾನಸಿಕ ಖಿನ್ನತೆಗೆ ಒಳಗಾಗಿದ್ದ ಎಂದು ದೂರಿನಲ್ಲಿ ತಿಳಿಸಿದ್ದಾರೆ. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ಕ್ರಮ ವಹಿಸಿದ್ದಾರೆ.