ಕಲಬುರಗಿ: ಬೀದರ್ ನಲ್ಲಿ ರೈಲಿಗೆ ತಲೆಕೊಟ್ಟು ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗುವಂತೆ ಆಂದೋಲಾ ಶ್ರೀ ಸಿದ್ದಲಿಂಗ ಸ್ವಾಮೀಜಿಗೆ ಸಿಐಡಿ ನೋಟಿಸ್ ಜಾರಿ ಮಾಡಿದೆ.
ಸಚಿನ್ ಆತ್ಮಹತ್ಯೆ ಪ್ರಕರಣದ ಬಗ್ಗೆ ತನಿಖೆ ನಡೆಸಲು ಜ.29 ಅಥವಾ ಜ.30 ರಂದು ಒಂದು ದಿನ ಬೆಂಗಳೂರಿನ ಸಿಐಡಿ ಕಚೇರಿಗೆ ವಿಚಾರಣೆಗೆ ಹಾಜರಾಗುವಂತೆ ಸಿಐಡಿ ಪೊಲೀಸರು ನೋಟಿಸ್ ನೀಡಿದ್ದಾರೆ. ಸಾವಿಗೂ ಮುನ್ನ ಸಚಿನ್ ಡೆತ್ ನೋಟ್ ಬರೆದಿಟ್ಟಿದ್ದರು. ಡೆತ್ ನೋಟ್ ನಲ್ಲಿ ಚಿತ್ತಾಪುರದ ಮಣಿಕಂಠ ರಾಠೋಡ್ ಹಾಗೂ ಶಾಸಕ ಬಸವರಾಜ್ ಮತ್ತಿಮೂಡ ಹತ್ಯೆಗೆ ಸಂಚು ರೂಪಿಸಲಾಗಿದೆ ಎಂದು ಉಲ್ಲೇಖಿಸಲಾಗಿತ್ತು, ಈ ಬಗ್ಗೆ ವಿಚಾರಣೆ ನಡೆಸಲು ಸಿಐಡಿ ನೋಟಿಸ್ ನೀಡಿದೆ.
ಬೀದರ್ ನಲ್ಲಿ ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಂಡ ಗುತ್ತಿಗೆದಾರ ಸಚಿನ್ ಪಾಂಚಾಳ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಪಟ್ಟಂತೆ, ರಾಜ್ಯ ಸರ್ಕಾರ ಈ ಪ್ರಕರಣವನ್ನು ಸಿಐಡಿ ತನಿಖೆಗೆ ವಹಿಸಿದ್ದು, ಸಿಡಿಐ ಈಗಾಗಲೇ ಹಲವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದೆ.