ಬೆಂಗಳೂರು: ಕರ್ನಾಟಕದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಅಪ್ರಚಾರ ನಡೆಸಿದ ಆರೋಪದ ಮೇಲೆ ‘ಕುಮಾರಸ್ವಾಮಿ ಫಾರ್ ಸಿಎಂ’ (Kumaraswamy For CM) ಸೋಶಿಯಲ್ ಮೀಡಿಯಾ ಪೇಜ್ ವಿರುದ್ಧ ಎಫ್ಐಆರ್ (FIR) ದಾಖಲಾಗಿದೆ.
ವಕೀಲರಾದ ದೀಪು ಸಿ.ಆರ್. ಅವರು ನೀಡಿದ ಅಧಿಕೃತ ದೂರಿನ ಮೇರೆಗೆ ಬೆಂಗಳೂರಿನ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಈ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.
ಜೆಡಿಎಸ್ (JDS) ಪಕ್ಷದ ಅಧಿಕೃತ ಜಾಲತಾಣದ ಪುಟಗಳಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ತಪ್ಪಾಗಿ ಚಿತ್ರಿಸುವ ನಿಟ್ಟಿನಲ್ಲಿ ಕೃತಕ ಬುದ್ಧಿಮತ್ತೆ (AI) ತಂತ್ರಜ್ಞಾನ ಬಳಸಿ ಸಿದ್ಧಪಡಿಸಲಾದ ವಿಡಿಯೋವೊಂದನ್ನು ಪ್ರಸಾರ ಮಾಡಲಾಗಿತ್ತು ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.ಸಿಎಂ ಡಿ.ಕೆ. ಶಿವಕುಮಾರ್ ಅವರ ತೇಜೋವಧೆ ಮಾಡಲು ಮತ್ತು ಅವರ ಘನತೆಗೆ ಧಕ್ಕೆ ತರಲು ಈ ವಿಡಿಯೋ ಬಳಸಲಾಗಿದೆ.ಸಮಾಜದಲ್ಲಿ ತಪ್ಪು ಸಂದೇಶ ರವಾನಿಸುವ ಮೂಲಕ ಸಾರ್ವಜನಿಕ ಶಾಂತಿ ಭಂಗಕ್ಕೆ ಯತ್ನಿಸಲಾಗಿದೆ ಎಂದು ದೂರುದಾರರು ಆರೋಪಿಸಿದ್ದಾರೆ. ಸದ್ಯ ಸದಾಶಿವನಗರ ಪೊಲೀಸರು ಪ್ರಕರಣವನ್ನು ಕೈಗೆತ್ತಿಕೊಂಡಿದ್ದು, ತನಿಖೆ ಚುರುಕುಗೊಳಿಸಿದ್ದಾರೆ.








