ಮೈಸೂರು : ರಾಜ್ಯ ರಾಜಕೀಯದಲ್ಲಿ ರಾಜಕೀಯ ಬೆಳವಣಿಗೆಯೊಂದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಕಾನೂನು ಕ್ರಮ ಜರುಗಿಸಲು ಅನುಮತಿ ನೀಡುವ ಪ್ರಾಸಿಕ್ಯೂಷನ್ ಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಸಹಿ ಹಾಕಿದ್ದು, ಸಿಎಂ ಸಿದ್ದರಾಮಯ್ಯ ಅವರು ಬುಧವಾರ ಶಾಸಕಾಂಗ ಪಕ್ಷದ ಸಭೆ ಕರೆದಿದ್ದಾರೆ.
ಸಿಎಂ ಸಿದ್ದರಾಮಯ್ಯ ಅವರು, ವರಿಷ್ಠರು, ಸಚಿವರ ಬಳಿಕ ಶಾಸಕರ ವಿಶ್ವಾಸ ಪಡೆಯುವ ನಿಟ್ಟಿನಲ್ಲಿ ಬುಧವಾರ ಶಾಸಕಾಂಗ ಪಕ್ಷದ ಸಭೆ ಕರೆದಿದ್ದಾರೆ. ಈ ವೇಳೆ ರಾಜ್ಯಪಾಲರ ವಿರುದ್ಧ ಶಾಸಕಾಂಗ ಸಭೆ ನಿರ್ನಯ ಕೈಗೊಳ್ಳುವ ಸಾಧ್ಯತೆ ಇದೆ. ಮುಂದಿನ ಹೋರಾಟಗಳಿಗೆ ಶಾಸಕರ ಸಹಕಾರವನ್ನು ಸಿಎಂ ಕೋರಲಿದ್ದಾರೆ ಎನ್ನಲಾಗಿದೆ.
ಇನ್ನು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವ ಹಿನ್ನೆಲೆಯಲ್ಲಿ ಮೈಸೂರು ಸೇರಿದಂತೆ ರಾಜ್ಯದ ಹಲವಡೆ ಮೋದಿ, ಶಾ ಸೇವಕನಾಗಿರುವ ಗೆಹ್ಲೋಟ್ ಗೆ ಧಿಕ್ಕಾರ ಎಂದು ಕೂಗಿ ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಮೈಸೂರು ಜಿಲ್ಲೆಯ ತಗಡೂರಿನಲ್ಲಿ ಕಾಂಗ್ರೆಸ್ ಕಾರ್ಯಕರ್ತರು ರಾಜ್ಯಪಾಲರ ವಿರುದ್ಧ ಧಿಕ್ಕಾರ ಕೂಗಿ ಭಾವಚಿತ್ರಕ್ಕೆ ಮಸಿ ಬಳಿದಿದ್ದಾರೆ. ಇನ್ನೂ ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ, ಯಾದಗಿರಿ, ಬೆಂಗಳುರು ಸೇರಿದಂತೆ ರಾಜ್ಯದ ಹಲವಡೆ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದಾರೆ.