ಬೆಂಗಳೂರು : ಕರ್ನಾಟಕ ರಾಜ್ಯದ ಮೂರು ಕ್ಷೇತ್ರಗಳ ಉಪಚುನಾವಣೆಯ ಮತ ಎಣಿಕೆ ಸದ್ಯ ಆರಂಭವಾಗಿದ್ದು, ಈಗಾಗಲೇ 3 ಕ್ಷೇತ್ರಗಳಲ್ಲಿ ಮತ ಎಣಿಕೆ ಕೇಂದ್ರದ ಸ್ಟ್ರಾಂಗ್ ರೂಮ್ ಅನ್ನು ಚುನಾವಣಾ ಸಿಬ್ಬಂದಿಗಳು ಓಪನ್ ಮಾಡಿ ಮತ ಎಣಿಕೆಯನ್ನು ಆರಂಭಸಿದ್ದಾರೆ.
ಕಳೆದ ನವೆಂಬರ್ 13ರಂದು ರಾಜ್ಯದ ರಾಮನಗರ ಜಿಲ್ಲೆಯ ಚನ್ನಪಟ್ಟಣ ಬಳ್ಳಾರಿ ಜಿಲ್ಲೆಯ ಸಂಡೂರು ಹಾಗೂ ಹಾವೇರಿ ಜಿಲ್ಲೆಯ ಶಿಗ್ಗಾವಿ ಕ್ಷೇತ್ರದಲ್ಲಿ ಉಪಚುನಾವಣೆಗೆ ಮತದಾನ ನಡೆದಿತ್ತು. ಇದೀಗ ಇಂದು ಈ ಒಂದು ಮೂರು ಕ್ಷೇತ್ರಗಳ ಉಪಚುನಾವಣೆ ಫಲಿತಾಂಶ ಹೊರಬೀಳಲಿದ್ದು, ಮಧ್ಯಾಹ್ನದೊಳಗೆ ಅಭ್ಯರ್ಥಿಗಳ ಭವಿಷ್ಯ ನಿರ್ಧಾರವಾಗಲಿದೆ.
ಈಗಾಗಲೇ ಮೂರು ಕ್ಷೇತ್ರಗಳಲ್ಲಿ ಆಯಾ ಜಿಲ್ಲಾಧಿಕಾರಿಗಳು ಮತ ಎಣಿಕೆ ಕೇಂದ್ರದಿಂದ 100 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿ ಮಾಡಿದ್ದು, ಐದಕ್ಕಿಂತ ಹೆಚ್ಚು ಜನರು ಗುಂಪುಗೂಡಿ ನಿಲ್ಲುವಂತಿಲ್ಲ ಹಾಗೂ ಇತರೆ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಲಾಗಿದೆ. ಅಲ್ಲದೆ ಮತ ಎಣಿಕೆ ಕೇಂದ್ರದ ಸುತ್ತಲೂ ಯಾವುದೇ ಅಹಿತಕರ ಘಟನೆ ನಡೆದಂತೆ ಬಿಗಿ ಪೊಲೀಸ್ ಬಂದೋ ಬಸ್ತ್ ವ್ಯವಸ್ಥೆ ಮಾಡಲಾಗಿದೆ. ಮಧ್ಯಾಹ್ನದ ಹೊತ್ತಿಗೆ ಮೂರು ಕ್ಷೇತ್ರಗಳ ಅಭ್ಯರ್ಥಿಗಳ ಭವಿಷ್ಯ ನಿರ್ಧಾರವಾಗಲಿದೆ. ಸೋಲು ಮತ್ತು ಗೆಲುವಿನ ಲೆಕ್ಕಾಚಾರಕ್ಕೆ ತೆರೆ ಬೀಳಲಿದೆ.
ಚನ್ನಪಟ್ಟಣ ಕ್ಷೇತ್ರದಿಂದ ಎನ್.ಡಿ.ಎ ಅಭ್ಯರ್ಥಿಯಾಗಿ ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಪುತ್ರ ನಿಖಿಲ್ ಅವರು ಸ್ಪರ್ಧೆ ಮಾಡಿದ್ದು, ಕಾಂಗ್ರೆಸ್ ಅಭ್ಯರ್ಥಿಯಾಗಿ ಸಿಪಿ ಯೋಗೇಶ್ವರ್ ಅವರು ಸ್ಪರ್ಧಿಸಿದ್ದಾರೆ. ಇನ್ನು ಸಂಡೂರು ವಿಧಾನಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಬಂಗಾರು ಹನುಮಂತು ಸ್ಪರ್ಧಿಸಿದರೆ, ಇನ್ನೂ ಕಾಂಗ್ರೆಸ್ ಅಭ್ಯರ್ಥಿಯಾಗಿ ಇ ತುಕಾರಾಂ ಪತ್ನಿ ಅನ್ನಪೂರ್ಣ ತುಕಾರಾಂ ಸ್ಪರ್ಧಿಸಿದ್ದಾರೆ. ಹಾಗೆ ಹಾವೇರಿ ಜಿಲ್ಲೆಯ ಶಿಗ್ಗಾವಿ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಪುತ್ರ ಬರತ್ ಬೊಮ್ಮಾಯಿ ಸ್ಪರ್ಧಿಸಿದರೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಯಾಸಿರ್ ಪಠಾಣ್ ಅವರು ಸ್ಪರ್ಧಿಸಿದ್ದಾರೆ.