ಬಳ್ಳಾರಿ : ಬಳ್ಳಾರಿ ಜಿಲ್ಲೆಯ ತೆಕ್ಕಲಕೋಟೆ ಪಟ್ಟಣದ ಬಳ್ಳಾರಿ–ಸಿರುಗುಪ್ಪ ರಾಷ್ಟ್ರೀಯ ಹೆದ್ದಾರಿಯಲ್ಲಿ ಬುಧವಾರ ಮಧ್ಯರಾತ್ರಿ ಸಂಭವಿಸಿದ ಅಗ್ನಿ ಅವಘಡದಲ್ಲಿ ತಿರುಮಲ ಹೋಟೆಲ್ ಸಂಪೂರ್ಣವಾಗಿ ಬೆಂಕಿಗೆ ಆಹುತಿಯಾಗಿದೆ. ಮಧ್ಯರಾತ್ರಿ ಸುಮಾರು 12 ಗಂಟೆ ವೇಳೆಗೆ ಹೋಟೆಲ್‌ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡು ಕ್ಷಣಾರ್ಧದಲ್ಲೇ ವ್ಯಾಪಕವಾಗಿ ಹಬ್ಬಿತು.
ಸ್ಫೋಟದ ಭಾರಿ ಶಬ್ಧಕ್ಕೆ ನಿದ್ದೆಯಲ್ಲಿದ್ದ ಕುಟುಂಬಸ್ಥರು ಬೆಚ್ಚಿಬಿದ್ದು ತಕ್ಷಣ ಹೊರಗೆ ಓಡಿ ಪ್ರಾಣಾಪಾಯದಿಂದ ಪಾರಾದರು. ಹೋಟೆಲ್ ಮಾಲೀಕ ಈರಣ್ಣ ಸೇರಿದಂತೆ ಒಟ್ಟು 9 ಮಂದಿ ಕುಟುಂಬ ಸದಸ್ಯರು ಈ ಸಂದರ್ಭದಲ್ಲಿ ಒಳಗಿದ್ದರೆಂದು ತಿಳಿದುಬಂದಿದೆ.
ಘಟನೆಯಲ್ಲಿ ಬಾಲಕ ಶ್ರೀನಿವಾಸ (10) ಸುಟ್ಟ ಗಾಯಗಳಿಗೆ ಒಳಗಾಗಿದ್ದು, ಉಳಿದವರು ಯಾವುದೇ ಅಪಾಯವಿಲ್ಲದೆ ಪಾರಾಗಿದ್ದಾರೆ. ಗಾಯಾಳುವಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿಯನ್ನು ನಿಯಂತ್ರಣಕ್ಕೆ ತಂದರು. ಘಟನೆಗೆ ಸಂಬಂಧಿಸಿದಂತೆ ತೆಕ್ಕಲಕೋಟೆ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.








