ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಭಾರಿ ಕುತೂಹಲ ಮೂಡಿಸಿದ್ದ ನಾಯಕತ್ವದ ಗೊಂದಲಕ್ಕೆ ತೆರೆ ಬಿದ್ದಿದ್ದು, ಇಂದು ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಅಧಿಕಾರ ಸ್ವೀಕರಿಸಲಿದ್ದಾರೆ. ಇದರ ಬೆನ್ನಲ್ಲೇ ಸಂಪುಟ ದರ್ಜೆಯ ಪ್ರಮುಖ ಹುದ್ದೆಗಳ ಹಂಚಿಕೆ ಕುರಿತು ರಾಜಕೀಯ ವಲಯದಲ್ಲಿ ಭಾರಿ ಚರ್ಚೆಗಳು ಆರಂಭವಾಗಿವೆ.
ಜಿ. ಪರಮೇಶ್ವರ್‌ಗೆ ಒಲಿಯಲಿದೆಯೇ ಉಪಮುಖ್ಯಮಂತ್ರಿ ಸ್ಥಾನ?
ಡಿ.ಕೆ. ಶಿವಕುಮಾರ್ ನೇತೃತ್ವದ ನೂತನ ಸಂಪುಟದಲ್ಲಿ ಹಿರಿಯ ನಾಯಕ ಡಾ. ಜಿ. ಪರಮೇಶ್ವರ್ ಅವರಿಗೆ ಉಪಮುಖ್ಯಮಂತ್ರಿ (ಡಿಸಿಎಂ) ಸ್ಥಾನ ಸಿಗುವ ಸಾಧ್ಯತೆ ದಟ್ಟವಾಗಿದೆ.
ಏಕೈಕ ಡಿಸಿಎಂ ಹುದ್ದೆ: ರಾಜ್ಯದಲ್ಲಿ ಹೆಚ್ಚುವರಿ ಡಿಸಿಎಂ ಸ್ಥಾನಗಳನ್ನು ಸೃಷ್ಟಿಸಲು ಕಾಂಗ್ರೆಸ್ ಹೈಕಮಾಂಡ್ ಸದ್ಯಕ್ಕೆ ಒಪ್ಪಿಗೆ ನೀಡಿಲ್ಲ ಎನ್ನಲಾಗಿದೆ. ಹೀಗಾಗಿ ಪರಮೇಶ್ವರ್ ಅವರು ಮಾತ್ರ ಏಕೈಕ ಉಪಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸುವ ಸಾಧ್ಯತೆಯಿದೆ.
ಕೆಪಿಸಿಸಿಗೆ ಹೊಸ ಸಾರಥಿ: ಬಿ.ಕೆ. ಹರಿಪ್ರಸಾದ್ ರೇಸ್‌ನಲ್ಲಿ ಮುಂಚೂಣಿ
ಡಿ.ಕೆ. ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಜವಾಬ್ದಾರಿ ವಹಿಸಿಕೊಳ್ಳುತ್ತಿರುವುದರಿಂದ, ತೆರವಾಗಲಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (KPCC) ಅಧ್ಯಕ್ಷ ಸ್ಥಾನಕ್ಕೆ ಹಿರಿಯ ನಾಯಕ ಬಿ.ಕೆ. ಹರಿಪ್ರಸಾದ್ ಅವರ ಹೆಸರು ಮುಂಚೂಣಿಗೆ ಬಂದಿದೆ. ಹೈಕಮಾಂಡ್ ಶೀಘ್ರದಲ್ಲೇ ಬಿ.ಕೆ. ಹರಿಪ್ರಸಾದ್ ಅವರನ್ನು ಕೆಪಿಸಿಸಿ ನೂತನ ಅಧ್ಯಕ್ಷರನ್ನಾಗಿ ಘೋಷಿಸುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.








