ಆಗ್ರಾ : ತಡರಾತ್ರಿ ಮತ್ತೊಂದು ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಕಾರು ಡಿಕ್ಕಿಯಾಗಿ ಐವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದ ಆಗ್ರಾದಲ್ಲಿ ನಡೆದಿದೆ.
ನ್ಯೂ ಆಗ್ರಾದ ನಾಗ್ಲಾ ಬುಧಿ ಪ್ರದೇಶದಲ್ಲಿ ವೇಗವಾಗಿ ಬಂದ ಕಾರು ಮನೆಗಳ ಹೊರಗೆ ಕುಳಿತಿದ್ದ ಜನರ ಮೇಲೆ ಗುದ್ದಿದ ಪರಿಣಾಮ ಐದು ಜನರು ಸಾವನ್ನಪ್ಪಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಸ್ಥಳೀಯರು ತಕ್ಷಣ ಪೊಲೀಸರಿಗೆ ಮಾಹಿತಿ ನೀಡಿ ಗಾಯಾಳುಗಳನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಿದರು.
ಪ್ರತ್ಯಕ್ಷದರ್ಶಿಗಳ ಪ್ರಕಾರ, ಕಾರು ಅತಿ ವೇಗದಲ್ಲಿ ಚಲಿಸುತ್ತಿದ್ದರಿಂದ ಚಾಲಕನ ನಿಯಂತ್ರಣ ತಪ್ಪಿ ಗೋಡೆಗೆ ಡಿಕ್ಕಿ ಹೊಡೆದು ರಸ್ತೆಬದಿಯಲ್ಲಿ ಕುಳಿತಿದ್ದ ಜನರು ಪುಡಿಪುಡಿಯಾದರು. ಪರಿಣಾಮ ಎಷ್ಟು ತೀವ್ರವಾಗಿತ್ತೆಂದರೆ, ಅನೇಕ ಜನರು ಸ್ಥಳದಲ್ಲೇ ಸಾವನ್ನಪ್ಪಿದರು.
ಈ ಹೃದಯವಿದ್ರಾವಕ ಘಟನೆಗೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ತೀವ್ರ ಸಂತಾಪ ಸೂಚಿಸಿದ್ದಾರೆ. ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆ ಮತ್ತು ಸಾಧ್ಯವಿರುವ ಎಲ್ಲಾ ಸಹಾಯವನ್ನು ಒದಗಿಸುವಂತೆ ಅವರು ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.








