ಬೆಂಗಳೂರು : ನಿನ್ನೆ ತಾನೆ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಹುಟ್ಟು ಹಬ್ಬ ಆಚರಿಸಿಕೊಂಡಿದ್ದು ಹುಟ್ಟು ಹಬ್ಬದ ಮರುದಿನವೇ ಇದೀಗ ಪೋಕ್ಸೋ ಪ್ರಕರಣದಲ್ಲಿ ಬಿಎಸ್ ಯಡಿಯೂರಪ್ಪಗೆ ಮತ್ತೆ ಸಂಕಷ್ಟ ಎದುರಾಗಿದ್ದು, ಮಾರ್ಚ್ 15 ರಂದು ಖುದ್ದು ಹಾಜರಾಗುವಂತೆ ಬೆಂಗಳೂರಿನ 1ನೇ ತ್ವರಿತಗತಿ ನ್ಯಾಯಾಲಯ ಬಿಎಸ್ ಯಡಿಯೂರಪ್ಪಗೆ ಸಮನ್ಸ್ ಜಾರಿ ಮಾಡಿದೆ.
ಇಂದು ಬೆಂಗಳೂರಿನ 1ನೇ ತ್ವರಿತಗತಿ ನ್ಯಾಯಾಲಯದಲ್ಲಿ ಪೋಕ್ಸೋ ಪ್ರಕರಣ ಸಂಬಂಧ ವಿಚಾರಣೆ ನಡೆಯಿತು. ವಿಚಾರಣೆಯ ವೇಳೆ ಕೋರ್ಟಿಗೆ ಸಲ್ಲಿಸಿದ ಆರಂಭ ಪಟ್ಟಿಯನ್ನು ಪರಿಗಣಿಸಿತು. ಬಳಿಕ ನ್ಯಾಯಾಲಯವು ಮಾರ್ಚ್ 15 ರಂದು ಕೋರ್ಟಿಗೆ ಖುದ್ದು ಹಾಜರಾಗುವಂತೆ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಹಾಗೂ ಇತರೆ ಆರೋಪಿಗಳಿಗೆ ಖುದ್ದು ಹಾಜರಾಗಿ ಎಂದು ಸಮನ್ಸ್ ಜಾರಿ ಮಾಡಿದೆ.ಹಾಗಾಗಿ ಬಿಎಸ್ ಯಡಿಯೂರಪ್ಪ ಗೆ ಮತ್ತೆ ಸಂಕಷ್ಟ ಎದುರಾಗಿದೆ.
ಪ್ರಕರಣ ಹಿನ್ನೆಲೆ?
ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ 2024ರ ಮಾರ್ಚ್ 3ರಂದು ಬಿಎಸ್ವೈ ವಿರುದ್ಧ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಆರೋಪದ ಮೇಲೆ ಪ್ರಕರಣ ದಾಖಲಾಗಿತ್ತು. ದೂರಿನ ಆಧಾರದ ಮೇಲೆ ಎಫ್‌ಐಆರ್ ದಾಖಲಿಸಲಾಗಿದೆ. ಪ್ರಕರಣದ ಗಂಭೀರತೆ ಪರಿಗಣಿಸಿ ಸರ್ಕಾರವು ಸಿಐಡಿಗೆ ವರ್ಗಾವಣೆ ಮಾಡಿತ್ತು. ಸಿಐಡಿ ಅಧಿಕಾರಿಗಳು ಯಡಿಯೂರಪ್ಪ ಅವರಿಗೆ ನೋಟಿಸ್ ನೀಡಿ, ವಿಚಾರಣೆಗೆ ಹಾಜರಾಗಲು ಸೂಚಿಸಿದ್ದರು. ಅದರಂತೆ ಯಡಿಯೂರಪ್ಪ ವಿಚಾರಣೆಗೆ ಹಾಜರಾಗಿ ತಮ್ಮ ಹೇಳಿಕೆಗಳನ್ನು ನೀಡಿದ್ದರು. ಈ ನಡುವೆ ತಮ್ಮ ವಿರುದ್ಧದ ಪ್ರಕರಣ ರದ್ದು ಮತ್ತು ನಿರೀಕ್ಷಣಾ ಜಾಮೀನು ಮಂಜೂರು ಮಾಡುವಂತೆ ಕೋರಿ ಯಡಿಯೂರಪ್ಪ ಹೈಕೋರ್ಟ್‌ಗೆ ಎರಡು ಪ್ರತ್ಯೇಕ ಅರ್ಜಿಗಳನ್ನು ಸಲ್ಲಿಸಿದ್ದರು.