ಬೆಂಗಳೂರು : ತಮಿಳುನಾಡು ಮಾಜಿ ಸಿಎಂ ದಿವಂಗತ ಜಯಯಲಲಿತಾ ಅವರಿಗೆ ಸಂಬಂಧಿಸಿದ ಆಸ್ತಿಪತ್ರಗಳು, ಅಪಾರ ಒಡವೆ ಮತ್ತು ವಸ್ತುಗಳನ್ನು ತಮಿಳುನಾಡು ಸರ್ಕಾರಕ್ಕೆ ಹಸ್ತಾಂತರಿಸುವ ಪ್ರಕ್ರಿಯೆ ಆರಂಭವಾಗಿದ್ದು, ಈ ಸಂಬಂಧ ಈಗಾಗಲೇ ತಮಿಳುನಾಡು ಪೊಲೀಸರು ಮತ್ತು ಅಧಿಕಾರಿಗಳು ಬೆಂಗಳೂರಿಗೆ ಆಗಮಿಸಿದ್ದಾರೆ ಎಂದು ತಿಳಿದುಬಂದಿದೆ.
ಹೌದು ಇಂದು ತಮಿಳುನಾಡಿನ ಮಾಜಿ ಸಿಎಂ ದಿವಂಗತ ಜಯಯಲಲಿತಾ ಅವರಿಗೆ ಸಂಬಂಧಿಸಿದ ಆಸ್ತಿಪತ್ರಗಳು, 11,344 ರೇಷ್ಮೆ ಸೀರೆಗಳು, 7040 ಗ್ರಾಂ ತೂಕದ 468 ಬಗೆಯ ಚಿನ್ನ, ವಜ್ರಖಚಿತ ಆಭರಣಗಳು ಹಾಗೂ 750 ಜೊತೆ ಚಪ್ಪಲಿಗಳು, ವಾಚ್‌ಗಳು ಸೇರಿದಂತೆ ಇನ್ನಿತರ ಬೆಲೆಬಾಳುವ ವಸ್ತುಗಳನ್ನು ತಮಿಳುನಾಡು ಸರ್ಕಾರಕ್ಕೆ ಹಸ್ತಾಂತರಿಸಲಾಗುತ್ತದೆ.
ಜಯಲಲಿತಾ ಆಸ್ತಿ ಎಷ್ಟು?
7 ಕೆಜಿ ತೂಕದ 468 ಬಗೆಯ ಚಿನ್ನ, ವಜ್ರಖಚಿತ ಆಭರಣಗಳು, 700 ಕೆ.ಜಿ ತೂಕದ ಬೆಳ್ಳಿ ಆಭರಣಗಳು, 740 ಐಷಾರಾಮಿ ಚಪ್ಪಲಿಗಳು, 11,344 ರೇಷ್ಮೆ ಸೀರೆಗಳು, 250 ಶಾಲು, 12 ರೆಫ್ರಿಜರೇಟರ್, 10 ಟಿವಿ ಸೆಟ್, 8 VCR, 1 ವಿಡಿಯೊ ಕ್ಯಾಮೆರಾ, 4 ಸಿಡಿ ಪ್ಲೇಯರ್, 2 ಆಡಿಯೋ ಡೆಕ್, 24 ಟೂ-ಇನ್ ಒನ್ ಟೇಪ್ ರೆಕಾರ್ಡರ್ ಹಾಗೂ 1040 ವಿಡಿಯೊ ಕ್ಯಾಸೆಟ್, 3 ಐರನ್ ಲಾಕರ್‌ಗಳು ತಮಿಳುನಾಡು ಸರ್ಕಾರಕ್ಕೆ ಸೇರಲಿವೆ.
ವಿಶೇಷ ನ್ಯಾಯಾಲಯವು ಬೆಲೆ ಬಾಳುವ ವಸ್ತುಗಳು, ಚಿನ್ನ ಮತ್ತು ವಜ್ರಾಭರಣಗಳನ್ನು ಹಿಂದಿರುಗಿಸಲು 2024ರ ಫೆ.19ಕ್ಕೆ ದಿನಾಂಕ ನಿಗದಿಪಡಿಸಿತ್ತು. 2024ರ ಮಾರ್ಚ್ 6 ಮತ್ತು 7ರಂದು ಅವುಗಳನ್ನು ಸ್ವಾಧೀನಪಡಿಸಿಕೊಳ್ಳಲು ಅಧಿಕೃತ ಅಧಿಕಾರಿಗಳನ್ನು ನಿಯೋಜಿಸುವಂತೆ ತಮಿಳುನಾಡು ಸರಕಾರಕ್ಕೆ ನಿರ್ದೇಶನ ನೀಡಿತ್ತು.
ದೀಪಾ ಮತ್ತು ದೀಪಕ್ ಅವರು ವಿಶೇಷ ನ್ಯಾಯಾಲಯದ ಆದೇಶದ ವಿರುದ್ಧ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಆಸ್ತಿ ಮತ್ತು ಬೆಲೆ ಬಾಳುವ ವಸ್ತುಗಳ ಹಸ್ತಾಂತರ ಪ್ರಕ್ರಿಯೆಗೆ ಒಂದು ದಿನ ಮೊದಲು 2024ರ ಮಾರ್ಚ್ 5ರಂದು ಹೈಕೋರ್ಟ್‌ನ ಏಕ ಸದಸ್ಯ ಪೀಠ, ವಿಶೇಷ ನ್ಯಾಯಾಲಯದ ಆದೇಶವನ್ನು ತಡೆಹಿಡಿದಿತ್ತು.
ಮೇಲ್ಮನವಿ ವಜಾಗೊಂಡ ಹಿನ್ನೆಲೆಯಲ್ಲಿ ವಿಶೇಷ ನ್ಯಾಯಾಲಯವು ಆಸ್ತಿ ಮತ್ತು ಆಭರಣಗಳನ್ನು ಹಸ್ತಾಂತರಿಸುತ್ತಿದೆ. ಅಕ್ರಮ ಆಸ್ತಿ ಗಳಿಕೆ ಪ್ರಕರಣದ ವಿಚಾರಣೆ ನಡೆಸಿದ್ದ ವಿಶೇಷ ನ್ಯಾಯಾಲಯವು, 2014ರ ಸೆ.27ರಂದು ಜಯಲಲಿತಾ ಅವರಿಗೆ ನಾಲ್ಕು ವರ್ಷ ಜೈಲು ಮತ್ತು 100 ಕೋಟಿ ರೂ. ದಂಡವನ್ನು ವಿಧಿಸಿತ್ತು.