ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಕೋಟ್ಯಾಂತರ ರೂಪಾಯಿ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇತ್ತೀಚಿಗೆ ಮಾಜಿ ಸಚಿವ ಬಿ ನಾಗೇಂದ್ರ ಅವರು ಜಾಮೀನಿನ ಮೇಲೆ ಪರಪ್ಪನ ಅಗ್ರಹಾರ ಜೈಲಿನಿಂದ ಬಿಡುಗಡೆಯಾಗಿದ್ದರು. ಇದೀಗ ಜಾಮೀನು ರದ್ದು ಕೋರಿ ಇಡಿ ಅಧಿಕಾರಿಗಳು ಹೈಕೋರ್ಟಿಗೆ ಅರ್ಜಿ ಸಲ್ಲಿಸಿದ್ದಾರೆ ಎಂದು ತಿಳಿದುಬಂದಿದೆ.
ಹೌದು ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಬ್ಯಾಂಕ್ ಖಾತೆಯಿಂದ ಕೋಟ್ಯಂತರ ಹಣವನ್ನು ಅಕ್ರಮವಾಗಿ ವರ್ಗಾಯಿಸಿರುವ ಪ್ರಕರಣದ ಆರೋಪಿಯಾಗಿರುವ ಮಾಜಿ ಸಚಿವ ಬಿ.ನಾಗೇಂದ್ರ ಅವರಿಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ನೀಡಿರುವ ಜಾಮೀನು ರದ್ದುಪಡಿಸುವಂತೆ ಕೋರಿ ಜಾರಿ ನಿರ್ದೇಶನಾಲಯ (ED) ಹೈಕೋರ್ಟ್ ಮೆಟ್ಟಿಲೇರಿದೆ.
ಈ ಕುರಿತು ಇ.ಡಿ. ಹೈಕೋರ್ಟ್ಗೆ ಸಲ್ಲಿಸಿರುವ ಕ್ರಿಮಿನಲ್ ಅರ್ಜಿ ಗುರುವಾರ ಗುರುವಾರ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರ ಪೀಠದ ಮುಂದೆ ವಿಚಾರಣೆಗೆ ನಿಗದಿಯಾಗಿದೆ. ಇತ್ತೀಚೆಗೆ ಬಳ್ಳಾರಿ ಗ್ರಾಮೀಣ ಕ್ಷೇತ್ರದ ಕಾಂಗ್ರೆಸ್ ಶಾಸಕ ಬಿ.ನಾಗೇಂದ್ರ ಅವರಿಗೆ ಜಾಮೀನು ನೀಡಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶಿಸಿತ್ತು.