ಬೆಂಗಳೂರು: ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಖಾಲಿ ಇರುವ ಶಿಕ್ಷಕರ ಹುದ್ದೆಗಳ ಭರ್ತಿಯನ್ನು ಎದುರು ನೋಡುತ್ತಿದ್ದ ಉದ್ಯೋಗ ಆಕಾಂಕ್ಷಿಗಳಿಗೆ ಕೊನೆಗೂ ರಾಜ್ಯ ಸರ್ಕಾರ ಸಿಹಿ ಸುದ್ದಿ ನೀಡಿದೆ. ಶಾಲಾ ಶಿಕ್ಷಣ ಇಲಾಖೆಯ ಬಲವರ್ಧನೆಗೆ ಮುಂದಾಗಿರುವ ಸರ್ಕಾರ, ಮುಂದಿನ 100 ದಿನಗಳ ಒಳಗಾಗಿ ಬರೋಬ್ಬರಿ 15,000 ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಲು ಮಹತ್ವದ ಅನುಮೋದನೆ ನೀಡಿದೆ.
ಪ್ರಸ್ತುತ ರಾಜ್ಯಾದ್ಯಂತ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಶಿಕ್ಷಕರ ಕೊರತೆ ತೀವ್ರವಾಗಿದೆ. ಇತ್ತೀಚಿನ ವರದಿಗಳ ಪ್ರಕಾರ, ರಾಜ್ಯದಲ್ಲಿ ಸದ್ಯ 80,000ಕ್ಕೂ ಹೆಚ್ಚು ಶಿಕ್ಷಕರ ಹುದ್ದೆಗಳು ಖಾಲಿ ಇವೆ. ಇದರಿಂದಾಗಿ ಗ್ರಾಮೀಣ ಹಾಗೂ ನಗರ ಭಾಗದ ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣ ನೀಡಲು ಹಿನ್ನಡೆಯಾಗುತ್ತಿದ್ದು, ಮಕ್ಕಳ ವ್ಯಾಸಂಗಕ್ಕೆ ತೊಂದರೆಯಾಗುತ್ತಿರುವುದನ್ನು ಮನಗಂಡು ಸರ್ಕಾರ ಈ ನಿರ್ಧಾರಕ್ಕೆ ಬಂದಿದೆ.
ಶಿಕ್ಷಕರ ಕೊರತೆಯನ್ನು ಹಂತ-ಹಂತವಾಗಿ ನೀಗಿಸಲು ಯೋಜಿಸಿರುವ ಸರ್ಕಾರ, ಒಟ್ಟಾರೆ 51,000 ಶಿಕ್ಷಕರ ಹುದ್ದೆಗಳ ನೇಮಕಾತಿಗೆ ಆರ್ಥಿಕ ಇಲಾಖೆಯಿಂದ ಹಸಿರು ನಿಶಾನೆ ಪಡೆದುಕೊಂಡಿದೆ. ಈ ಬೃಹತ್ ನೇಮಕಾತಿ ಪ್ರಕ್ರಿಯೆಯ ಮೊದಲ ಹಂತವಾಗಿ, ಸದ್ಯಕ್ಕೆ 15,000 ಶಿಕ್ಷಕರ ಹುದ್ದೆಗಳನ್ನು ತುರ್ತಾಗಿ ಭರ್ತಿ ಮಾಡಲು ಆಡಳಿತಾತ್ಮಕ ಮತ್ತು ಆರ್ಥಿಕ ಅನುಮೋದನೆಯನ್ನು ಅಧಿಕೃತವಾಗಿ ನೀಡಲಾಗಿದೆ.
ಮುಂದಿನ ಮೂರು ತಿಂಗಳ ಅವಧಿಯಲ್ಲಿ ಈ ಇಡೀ ನೇಮಕಾತಿ ಪ್ರಕ್ರಿಯೆಯನ್ನು ಪಾರದರ್ಶಕವಾಗಿ ಮುಗಿಸಲು ಶಿಕ್ಷಣ ಇಲಾಖೆ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದೆ. ಎಲ್ಲವೂ ಅಂದುಕೊಂಡಂತೆ ನಡೆದರೆ, ಮುಂದಿನ ವಾರದಲ್ಲೇ 15,000 ಪ್ರಾಥಮಿಕ ಶಾಲಾ ಶಿಕ್ಷಕರ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಅಧಿಕೃತ ಅಧಿಸೂಚನೆ (Notification) ಹೊರಬೀಳುವ ಸಾಧ್ಯತೆ ದಟ್ಟವಾಗಿದೆ.
ಬಹಳ ದಿನಗಳಿಂದ ಶಿಕ್ಷಕರ ಹುದ್ದೆಗಾಗಿ ಕಾಯುತ್ತಾ, ಟಿಇಟಿ (TET) ಮತ್ತು ಸಿಇಟಿ (CET) ಪರೀಕ್ಷೆಗಳಿಗೆ ಸಿದ್ಧತೆ ನಡೆಸುತ್ತಿದ್ದ ಲಕ್ಷಾಂತರ ನಿರುದ್ಯೋಗಿ ಪದವೀಧರರಿಗೆ ಸರ್ಕಾರದ ಈ ನಿರ್ಧಾರ ಹೊಸ ಭರವಸೆ ಮೂಡಿಸಿದೆ. ಮುಂದಿನ ವಾರ ಅಧಿಸೂಚನೆ ಪ್ರಕಟವಾದ ಬೆನ್ನಲ್ಲೇ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಲಿದ್ದು, ಅರ್ಹ ಅಭ್ಯರ್ಥಿಗಳು ಇಲಾಖೆಯ ಅಧಿಕೃತ ವೆಬ್‌ಸೈಟ್ ಗಮನಿಸುತ್ತಿರಲು ಕೋರಲಾಗಿದೆ.








