ಬೆಂಗಳೂರು : ಪೊಲೀಸ್ ಸಬ್ ಇನ್ಸ್ಪೆಕ್ಟರ್(PSI) ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಸಿಹಿಸುದ್ದಿ ಸಿಕ್ಕಿದ್ದು, ವಾರದೊಳಗೆ ನೇಮಕಾತಿ ಆದೇಶ ನೀಡಲು ಗೃಹ ಸಚಿವ ಡಾ.ಜಿ. ಪರಮೇಶ್ವರ್ ಸೂಚನೆ ನೀಡಿದ್ದಾರೆ.
ಹೌದು, ಪಿಎಸ್ ಐ ಹುದ್ದೆಗೆ ಆಯ್ಕೆ ಪ್ರಕ್ರಿಯೆ ಪೂರ್ಣಗೊಂಡಿದ್ದರೂ ನೇಮಕಾತಿ ವಿಳಂಬವಾಗಿರುವುದಕ್ಕೆ ಅಸಮಾಧಾನ ವ್ಯಕ್ತಪಡಿಸಿರುವ ಸಚಿವರು, ವಾರದೊಳಗೆ ನೇಮಕಾತಿ ಆದೇಶ ನೀಡುವಂತೆ ಇಲಾಖೆಯ ಅಧಿಕಾರಿಗಳಿಗೆ ತಾಕೀತು ಮಾಡಿದ್ದಾರೆ.
402 ಪಿಎಸ್ಐ ಹುದ್ದೆಗಳ ಭರ್ತಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಪರೀಕ್ಷೆ, ಅಭ್ಯರ್ಥಿಗಳ ಅಂಕಪಟ್ಟಿ ಪ್ರಕಟ, ಕಳೆದ ಡಿಸೆಂಬರ್ ನಲ್ಲಿ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟಿಸಲಾಗಿದೆ. ಆಯ್ಕೆಯಾದ ಅಭ್ಯರ್ಥಿಗಳ ಶೈಕ್ಷಣಿಕ ದಾಖಲೆ ಪರಿಶೀಲನೆ, ವೈದ್ಯಕೀಯ ಪರೀಕ್ಷೆ, ಪೊಲೀಸ್ ಪರಿಶೀಲನೆ ಕಾರ್ಯ ಮುಗಿದಿದೆ. ಹೀಗಿದ್ದರೂ ನೇಮಕಾತಿ ಆದೇಶ ಪತ್ರ ನೀಡಿಲ್ಲ. ಸರ್ಕಾರ ಮತ್ತು ಇಲಾಖೆ ಬಗ್ಗೆ ಕೆಟ್ಟ ಅಭಿಪ್ರಾಯ ಬರುತ್ತದೆ ಎಂದು ಸಚಿವ ಪರಮೇಶ್ವರ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ವಯೋಮಿತಿ ಮೀರುತ್ತಿದೆ ಎಂದು ಆಯ್ಕೆಯಾದ ಅಭ್ಯರ್ಥಿಗಳು ಆತಂಕಕ್ಕೀಡಾಗಿದ್ದು ಅರ್ಹ ಅಭ್ಯರ್ಥಿಗಳಿಗೆ ವಾರದೊಳಗೆ ನೇಮಕಾತಿ ಆದೇಶ ನೀಡಬೇಕೆಂದು ಸೂಚಿಸಿದ್ದಾರೆ.
ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್, ನೇಮಕಾತಿ ವಿಭಾಗದ ಎಡಿಜಿಪಿ ಮುರುಗನ್ ಹಾಗೂ ಇತರೆ ಅಧಿಕಾರಿಗಳೊಂದಿಗೆ ಶುಕ್ರವಾರ ಗೃಹ ಸಚಿವರು ಸಭೆ ನಡೆಸಿದ್ದಾರೆ.