ಬೆಂಗಳೂರು : ರಾಜ್ಯದ 5,950 ಗ್ರಾಮ ಪಂಚಾಯಿತಿಗಳ ಚುನಾವಣೆಗೆ ಮೀಸಲು ಪಟ್ಟಿ ಅಂತಿಮಗೊಳಿಸಲು ಕನಿಷ್ಠ ಮೂರು ತಿಂಗಳು ಕಾಲಾವಕಾಶ ಬೇಕೆಂದು ರಾಜ್ಯ ಸರ್ಕಾರ ಹೈಕೋರ್ಟ್‌ಗೆ ಮೌಖಿಕವಾಗಿ ತಿಳಿಸಿದೆ. ಈ ಹಿನ್ನೆಲೆಯಲ್ಲಿ ಸದ್ಯಕ್ಕೆ ಚುನಾವಣೆ ನಡೆಯುವುದು ಅನುಮಾನ ಎಂದು ಹೇಳಲಾಗಿದೆ. ನ್ಯಾಯಾಲಯವು ಸರ್ಕಾರದ ವಸ್ತುಸ್ಥಿತಿ ವರದಿಯನ್ನು ದಾಖಲಿಸಿಕೊಂಡು ವಿಚಾರಣೆಯನ್ನು ಏಪ್ರಿಲ್ 29ಕ್ಕೆ ಮುಂದೂಡಿದೆ.
ಹೌದು ವಾರ್ಡ್‌ಗಳ ವಿಂಗಡಣೆ ಮತ್ತು ಮೀಸಲಾತಿ ಪಟ್ಟಿ ಅಂತಿಮಗೊಳಿಸಲು ಸರ್ಕಾರಕ್ಕೆ ಹೆಚ್ಚಿನ ಸಮಯದ ಅಗತ್ಯವಿದೆ. ಚುನಾವಣೆ ವಿಳಂಬವಾಗುವುದರಿಂದ ಹಾಲಿ ಸದಸ್ಯರ ಅವಧಿ ಮುಕ್ತಾಯಗೊಂಡರೆ ಆಡಳಿತಾಧಿಕಾರಿಗಳ ನೇಮಕ ಅಥವಾ ಸದಸ್ಯರ ಮುಂದುವರಿಕೆ ಬಗ್ಗೆ ಚರ್ಚೆ ನಡೆಯುತ್ತಿದೆ. ಹೈಕೋರ್ಟ್ ವಿಭಾಗೀಯ ಪೀಠವು ಸರ್ಕಾರದ ವಾದವನ್ನು ಆಲಿಸಿ, ವಿಚಾರಣೆಯನ್ನು ಏಪ್ರಿಲ್ 29ಕ್ಕೆ ಮುಂದೂಡಿದೆ.
ಅವಧಿ ಮುಗಿದ ರಾಜ್ಯದ 5,950 ಗ್ರಾಮ ಪಂಚಾಯಿತಿ ಹಾಗೂ 187 ನಗರ ಸ್ಥಳೀಯ ಸಂಸ್ಥೆಗಳಿಗೆ ಸಕಾಲದಲ್ಲಿಸಾರ್ವತ್ರಿಕ ಚುನಾವಣೆ ನಡೆಸಲು ಆಯೋಗಕ್ಕೆ ಅನುಕೂಲವಾಗಲು ಅಂತಿಮ ಮೀಸಲು ಅಧಿಸೂಚನೆ ಹೊರಡಿಸಲು ತಕ್ಷಣ ಕ್ರಮ ಕೈಗೊಳ್ಳಲು ನಿರ್ದೇಶನ ನೀಡಬೇಕು ಎಂದು ಕೋರಿ ರಾಜ್ಯ ಚುನಾವಣಾ ಆಯೋಗ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳನ್ನು ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ಹಾಗೂ ನ್ಯಾ. ಸಿ.ಎಂ ಪೂಣಚ್ಚ ಅವರಿದ್ದ ವಿಭಾಗೀಯ ಪೀಠ ಸೋಮವಾರ ವಿಚಾರಣೆ ನಡೆಸಿತು.
ಸರಕಾರದ ಪರ ಹೆಚ್ಚುವರಿ ಅಡ್ವೊಕೇಟ್ ಜನರಲ್ ಪ್ರತಿಮಾ ಹೊನ್ನಾಪುರ , ಗ್ರಾಮ ಪಂಚಾಯ್ತಿ ಹಾಗೂ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಸಂಬಂಧಿಸಿದಂತೆ ಸರಕಾರ ಈವರೆಗೆ ಕೈಗೊಂಡಿರುವ ಕ್ರಮಗಳ ವಸ್ತುಸ್ಥಿತಿ ವರದಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿದರು. ಸರಕಾರದ ಹೇಳಿಕೆ ದಾಖಲಿಸಿಕೊಂಡ ನ್ಯಾಯಪೀಠ, ವಿಚಾರಣೆಯನ್ನು ಏಪ್ರಿಲ್ 29ಕ್ಕೆ ಮುಂದೂಡಿತು.








