ಬೆಂಗಳೂರು: ರಾಜ್ಯದಲ್ಲಿ ಫೈನಾನ್ಸ್ ಕಿರುಕುಳದಿಂದ ಆತ್ಮಹತ್ಯೆ ಪ್ರಕರಣಗಳು ಹೆಚ್ಚಳವಾದ ಬೆನ್ನಲ್ಲೇ ರಾಜ್ಯ ಸರ್ಕಾರ ಫೈನಾನ್ಸ್ ಕಿರುಕುಳಕ್ಕೆ ಬ್ರೇಕ್ ಹಾಕಲು ಮುಂದಾಗಿದೆ.
ಹೌದು, ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಕಿರುಕುಳ ತಡೆಗಟ್ಟಲು ಗೈಡ್ ಲೈನ್ಸ್ ಜಾರಿಗೆ ತರಲಾಗುವುದು ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ ತಿಳಿಸಿದ್ದಾರೆ.
ಸುದ್ದಿಗೋಷ್ಟಿಯಲ್ಲಿ ಈ ಕುರಿತು ಮಾಹಿತಿ ನೀಡಿದ ಕಮಿಷನರ್ ದಯಾನಂದ್, ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಕಿರುಕುಳ ಹೆಚ್ಚಾಗಿದ್ದು, ಈಗಾಗಲೇ ಸರ್ಕಾರದ ಮಟ್ಟದಲ್ಲಿ ಎರಡು ಸಭೆಗಳನ್ನು ನಡೆಸಲಾಗಿದೆ. ಸಭೆಯಲ್ಲಿ ಕೆಲವೊಂದು ಗೈಡ್ ಲೈನ್ಸ್ ಜಾರಿಗೆ ತರುವಂತೆ ಸೂಚನೆ ನೀಡಲಾಗಿದೆ. ಸರ್ಕಾರದ ಸೂಚನೆಯಂತೆ ಮಾರ್ಗಸೂಚಿಗಳನ್ನು ಜಾರಿಗೆ ತರಲಾಗುವುದು ಎಂದರು.
ಮೀಟರ್ ಬಡ್ಡಿ ದಂಧೆಕೋರರ ಮೇಲೆ ಹದ್ದಿನ ಕಣ್ಣಿಡಲು ಸೂಚಿಸಲಾಗಿದೆ. ಫೈನಾನ್ಸ್ ನವರಿಂದ ಯಾವುದೇ ತೊಂದರೆಯಾದಲ್ಲಿ ದೂರು ನೀಡಿದರೆ ತಕ್ಷಣ ಕ್ರಮ ಕೈಗೊಳ್ಳಲಾಗುವುದು ಎಂದು ಖಡಕ್ ಎಚ್ಚರಿಕೆ ನೀಡಿದ್ದಾರೆ.