ಬೆಂಗಳೂರು : ಸುಪ್ರೀಂ ಕೋರ್ಟ್ ಮಾರ್ಗಸೂಚಿಗಳನ್ನು ಉಲ್ಲಂಘಿಸಿ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ (KSPCB) ಅಧ್ಯಕ್ಷರಾಗಿ ಶಾಸಕ ಪಿ.ಎಂ.ನರೇಂದ್ರಸ್ವಾಮಿ ಅವರನ್ನು ನೇಮಕ ಮಾಡಲಾಗಿದೆ ಎಂದು ಆಕ್ಷೇಪಿಸಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಲಾಗಿದೆ. ಇದೀಗ ಈ ಒಂದು ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ರಾಜ್ಯ ಸರ್ಕಾರ ಹಾಗೂ ಪಿಎಂ ನರೇಂದ್ರಸ್ವಾಮಿ ಪ್ರತಿವಾದಿಗಳಿಗೆ ನೋಟಿಸ್ ಜಾರಿಗೊಳಿಸಿದೆ.
ಶಾಶ್ವತ ನೀರಾವರಿ ಹೋರಾಟ ಸಮಿತಿಯ ಆರ್. ಆಂಜನೇಯರೆಡ್ಡಿ ಬುಧವಾರ ಈ ಕುರಿತು ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸಲ್ಲಿಸಿದ್ದು, ಇಂದು ಹೈಕೋರ್ಟ್ ನಲ್ಲಿ ಅರ್ಜಿಯ ವಿಚಾರಣೆ ನಡೆಯಿತು. ವಿಚಾರಣೆಯ ಬಳಿಕ ರಾಜ್ಯ ಸರ್ಕಾರ ಮತ್ತು ಶಾಸಕ ನರೇಂದ್ರ ಸ್ವಾಮಿ ಸೇರಿ ಪ್ರತಿವಾದಿಗಳಿಗೆ ಹೈ ಕೋರ್ಟ್ ವಿಭಾಗೀಯ ಪೀಠದಿಂದ ನೋಟಿಸ್ ಜಾರಿ ಮಾಡಲಾಗಿದೆ. ಸುಪ್ರೀಂ ಕೋರ್ಟ್ ಮಾರ್ಗಸೂಚಿ ಉಲ್ಲಂಘಿಸಿ ನೇಮಕ ಮಾಡಲಾಗಿದೆ ಎಂದು ಅರ್ಜಿ ಸಲ್ಲಿಕೆಯಾಗಿತ್ತು. ಮಂಡಳಿ ಅಧ್ಯಕ್ಷರಾಗಿ ನರೇಂದ್ರಸ್ವಾಮಿ ನೇಮಕ ರದ್ದು ಪಡಿಸಲು ಅರ್ಜಿಯಲ್ಲಿ ಮನವಿ ಮಾಡಲಾಗಿದೆ ಮಾಲಿನ್ಯ ನಿಯಂತ್ರಣ ಮಂಡಳಿಗೆ ಪಿಎಂ ನರೇಂದ್ರಸ್ವಾಮಿ ಅವರನ್ನು ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ.
ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿ ಹಾಗೂ ರಾಜ್ಯಗಳ ಮಾಲಿನ್ಯ ನಿಯಂತ್ರಣ ಮಂಡಳಿಗಳ ಅಧ್ಯಕ್ಷರ ನೇಮಕ ಸಂಬಂಧ ಸುಪ್ರೀಂ ಕೋರ್ಟ್ ಸ್ಪಷ್ಟ ಮಾರ್ಗಸೂಚಿ ಹೊರಡಿಸಿದೆ. ಆದರೆ ರಾಜ್ಯ ಸರ್ಕಾರ ಆ ಮಾರ್ಗಸೂಚಿಗಳನ್ನು ಉಲ್ಲಂಘನೆ ಮಾಡಿದೆ. ಅಲ್ಲದೆ, ಪರಿಸರ ವಿಜ್ಞಾನ ಸೇರಿದಂತೆ ಯಾವುದೇ ನಿರ್ದಿಷ್ಟ ಅರ್ಹತೆ ಇಲ್ಲದವರನ್ನು ರಾಜಕೀಯ ಕಾರಣಗಳಿಗೆ ನೇಮಕ ಮಾಡಲಾಗಿದೆ. ಹಾಗಾಗಿ ಮಾಲಿನ್ಯ ನಿಯಂತ್ರಣ ಮಂಡಳಿಗೆ ಅಧ್ಯಕ್ಷರಾಗಿ ಪಿ.ಎಂ. ನರೇಂದ್ರಸ್ವಾಮಿ ನೇಮಕ ಮಾಡಿ ಹೊರಡಿಸಿರುವ ಆದೇಶ ರದ್ದುಪಡಿಸಬೇಕು ಎಂದು ಅರ್ಜಿಯಲ್ಲಿ ಕೋರಲಾಗಿತ್ತು.