ಬೆಂಗಳೂರು : ರಾಜ್ಯದಲ್ಲಿ ಮುಂಗಾರು ಮಳೆಯ ಆರ್ಭಟ ಮುಂದುವರೆದಿದ್ದು, ಹಲವು ಜಿಲ್ಲೆಗಳಲ್ಲಿ ಅಂಗನವಾಡಿ, ಶಾಲೆ,ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.
ಭಾರೀ ಮಳೆಯ ಹಿನ್ನೆಲೆಯಲ್ಲಿ ಮೇ.30 ರ ಇಂದು ದಕ್ಷಿಣ ಕನ್ನಡ, ಉಡುಪಿ, ಕೊಡಗು, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ.
ದಕ್ಷಿಣ ಕನ್ನಡ ಜಿಲ್ಲೆ
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಧಾರಾಕಾರ ಮಳೆಯಾಗುತ್ತಿದೆ. ಹೀಗಾಗಿ ಜಿಲ್ಲೆಯಾದ್ಯಂತ ಎಲ್ಲಾ ಶಾಲೆಯಗಳಿಗೆ ಇಂದು ರಜೆ ಘೋಷಿಸಲಾಗಿದೆ. ಜಿಲ್ಲೆಯಲ್ಲಿ ಮಳೆಯ ಆರ್ಭಟ ಮುಂದುವರಿದ ಹಿನ್ನೆಲೆ ಮೇ 30ರಂದು ಎಲ್ಲಾ ಶಾಲೆ ಹಾಗೂ ಅಂಗನವಾಡಿ ಕೇಂದ್ರಗಳಿಗೆ ರಜೆ ಘೋಷಿಸಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ. ಮಂಗಳೂರು ಸೇರಿದಂತೆ ಜಿಲ್ಲೆಯಾದ್ಯಂತ ರಾತ್ರಿಯಿಡಿ ಸುರಿದ ಭಾರೀ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತವಾಗಿದ್ದು, ಮಳೆ ಆರ್ಭಟ ಮುಂದುವರಿದಿದೆ.
ಉತ್ತರ ಕನ್ನಡದಲ್ಲಿ ಅಂಗನವಾಡಿಗಳಿಗೆ ರಜೆ:
ಜಿಲ್ಲೆಯಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಇಂದು (ಮೇ 30) ಅಂಗನವಾಡಿಗಳಿಗೆ ರಜೆ ಘೋಷಿಸಲಾಗಿದೆ.
ಉಡುಪಿ ಜಿಲ್ಲೆಯಲ್ಲಿ ಅಂಗನವಾಡಿ, ಪ್ರೌಢಶಾಲೆಗಳಿಗೆ ರಜೆ ಘೋಷಣೆ
ಜಿಲ್ಲೆಯಾದ್ಯಂತ ಭಾರೀ ಮಳೆ ಆಗುತ್ತಿರುವ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲೆಯ ಎಲ್ಲಾ ಅಂಗನವಾಡಿ ಹಾಗೂ ಒಂದರಿಂದ ಹತ್ತನೇ ತರಗತಿವರೆಗೆ ( ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢಶಾಲೆ ) ಇಂದು ರಜೆ ಘೋಷಿಸಿ ಜಿಲ್ಲಾಧಿಕಾರಿ ವಿದ್ಯಾ ಕುಮಾರಿ ಆದೇಶ ಹೊರಡಿಸಿದ್ದಾರೆ.
ಕೊಡಗು ಜಿಲ್ಲೆಯಲ್ಲಿ ಇಂದು ಅಂಗನವಾಡಿ, ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.
ಈ ಕುರಿತಂತೆ ಮಡಿಕೇರಿ ಜಿಲ್ಲಾಧಿಕಾರಿ ವೆಂಕಟರಾಜಾ ಅವರು ಆದೇಶಿಸಿದ್ದು, ಶುಕ್ರವಾರದಂದು ಜಿಲ್ಲೆಯಲ್ಲಿ ಭಾರೀ ಮಳೆಯಾಗುವಂತ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಅಲ್ಲದೇ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ ಎಂದಿದ್ದಾರೆ.