ಬೆಂಗಳೂರು: ಕರಾವಳಿ ಸೇರಿದಂತೆ ರಾಜ್ಯಾದ್ಯಂತ ಭಾರೀ ಮಳೆಯಾಗುತ್ತಿದ್ದು, ಹಲವಡೆ ನದಿಗಳು ಉಕ್ಕಿ ಹರಿಯುತ್ತಿರುವ ಹಿನ್ನೆಲೆಯಲ್ಲಿ ಜಲಪಾತಗಳು, ಪ್ರವಾಸಿ ತಾಣಗಳಿಗೆ ಪ್ರವಾಸಿಗರಿಗೆ ಪ್ರವೇಶ ನಿಷೇಧಿಸಲಾಗಿದೆ.
ಉತ್ತರ ಕನ್ನಡ ಜಿಲ್ಲೆ ಯಲ್ಲಾಪುರ ತಾಲೂಕಿನಲ್ಲಿ ಭಾರಿ ಮಳೆಯಾಗುತ್ತಿದ್ದು, ಯಲ್ಲಾಪುರ ತಾಲೂಕಿನ ಜಲಪಾತಗಳಿಗೆ ಪ್ರವಾಸಿಗರಿಗೆ ನಿರ್ಬಂಧ ಹೇರಲಾಗಿದೆ.ಯಲ್ಲಾಪುರ ತಾಲೂಕಿನ ಎಲ್ಲಾ ಜಲಪಾತಗಳ ವೀಕ್ಷಣೆಗೆ ನಿಷೇಧ ಹೇರಲಾಗಿದೆ. ಯಲ್ಲಾಪುರ ತಾಲೂಕಿನ ಶಿರಲೆ ಜಲಪಾತ, ಕಾನೂರು ಫಾಲ್ಸ್, ಕುಳಿ ಮಾಗೋಡು ಜಲಪಾತ ಬಳಿ ತೆರಳದಂತೆ ಅರಣ್ಯ ಇಲಾಖೆ ಆದೇಶ ಹೊರಡಿಸಿದೆ.
ಇನ್ನು ಉಡುಪಿ, ದಕ್ಷಿಣ ಕನ್ನಡ ಸೇರಿದಂತೆ ಕರಾವಳಿಯಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಇಂದು ಬೆಳ್ತಂಗಡಿ, ಬಂಟ್ವಾಳ ತಾಲೂಕಿನ ಶಾಲೆಗಳಿಗೆ ರಜೆ ಘೋಷಿಸಿ ಆದೇಶಿಸಲಾಗಿದೆ.
ಭಾರಿ ಮಳೆಯಾಗುತ್ತಿರುವ ಹಿನ್ನೆಲೆ ಬೆಳ್ತಂಗಡಿ ಹಾಗೂ ಬಂಟ್ವಾಳ ಶಾಲೆಗಳಿಗೆ ಜು.4ರ ಇಂದು ತಹಶೀಲ್ದಾರ್ ರಜೆ ಘೋಷಿಸಿದ್ದಾರೆ. ಬೆಳ್ತಂಗಡಿ ತಾಲೂಕಿನ ಎಲ್ಲಾ ಸರಕಾರಿ, ಅನುದಾನಿತ, ಅನುದಾನ ರಹಿತ, ಪ್ರಾಥಮಿಕ, ಪ್ರೌಢಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಇನ್ನು ಬಂಟ್ವಾಳ ತಾಲೂಕಿನ ಎಲ್ಲ ಶಾಲೆಗಳಿಗೆ ತಹಶೀಲ್ದಾರ್ ರಜೆ ಘೋಷಿಸಿದ್ದಾರೆ.
ರಾಜ್ಯದ ಹಲವು ಕರಾವಳಿ ಜಿಲ್ಲೆಗಳಲ್ಲಿ ಇಂದು ಭಾರೀ ಮಳೆಯ ಮುನ್ಸೂಚನೆ ನೀಡಲಾಗಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.