ರಾಯಚೂರು: ರಾಜ್ಯದಲ್ಲಿ ಶೀಘ್ರದಲ್ಲೇ ಸಚಿವ ಸಂಪುಟ ವಿಸ್ತರಣೆಯಾಗುವ ಸಾಧ್ಯತೆಗಳು ದಟ್ಟವಾಗಿವೆ ಎಂದು ವಿಧಾನ ಪರಿಷತ್ ಸದಸ್ಯ ಯತೀಂದ್ರ ಸಿದ್ದರಾಮಯ್ಯ ಅವರು ಮಹತ್ವದ ಹೇಳಿಕೆ ನೀಡಿದ್ದಾರೆ. ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಸಂಪುಟ ವಿಸ್ತರಣೆ ಪ್ರಕ್ರಿಯೆಗೆ ಈಗಾಗಲೇ ಪಕ್ಷದ ರಾಷ್ಟ್ರೀಯ ನಾಯಕರು ಮತ್ತು ಹೈಕಮಾಂಡ್ ಸಹಮತ ವ್ಯಕ್ತಪಡಿಸಿದೆ ಎಂದು ಸ್ಪಷ್ಟಪಡಿಸಿದರು.
ಸಂಪುಟ ವಿಸ್ತರಣೆಯ ಸಂದರ್ಭದಲ್ಲಿ ಸ್ಥಳೀಯ ಹಿರಿಯ ನಾಯಕರಿಗೆ ಆದ್ಯತೆ ಸಿಗುವ ಕುರಿತು ಮಾತನಾಡಿದ ಯತೀಂದ್ರ ಸಿದ್ದರಾಮಯ್ಯ, ತಮಗೆ ಪಿತೃಸಮಾನರಾದ ಹಿರಿಯ ನಾಯಕ ಹಂಪನಗೌಡ ಬಾದರ್ಲಿ ಅವರಿಗೆ ಸಚಿವ ಸ್ಥಾನ ಲಭಿಸಬೇಕು ಎನ್ನುವ ಆಸೆ ತಮಗೂ ಇದೆ ಎಂದು ತಮ್ಮ ಮನದ ಇಂಗಿತವನ್ನು ಹೊರಹಾಕಿದರು. ಜಿಲ್ಲೆಯ ಹಿರಿಯ ನಾಯಕರ ಪರವಾಗಿ ಅವರು ಬ್ಯಾಟಿಂಗ್ ಮಾಡಿರುವುದು ರಾಜಕೀಯ ವಲಯದಲ್ಲಿ ಕುತೂಹಲ ಮೂಡಿಸಿದೆ.
ರಾಜ್ಯ ರಾಜಕಾರಣದಲ್ಲಿ ಸದಾ ಚರ್ಚೆಯಲ್ಲಿರುವ ಮುಖ್ಯಮಂತ್ರಿ ಬದಲಾವಣೆ ವಿಷಯದ ಕುರಿತು ಕೇಳಲಾದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಈ ಕುರಿತು ಸಿಎಂ ಸಿದ್ದರಾಮಯ್ಯ ಅವರೇ ಈಗಾಗಲೇ ಹಲವು ಬಾರಿ ಸ್ಪಷ್ಟನೆ ನೀಡಿದ್ದಾರೆ. ಸಿಎಂ ಸ್ಥಾನದ ಬದಲಾವಣೆ ಅಥವಾ ಯಾವುದೇ ಪ್ರಮುಖ ನಿರ್ಧಾರಗಳಿಗೆ ಸಂಬಂಧಿಸಿದಂತೆ ಅವರು ಹೈಕಮಾಂಡ್ ತೀರ್ಮಾನಕ್ಕೆ ಸಂಪೂರ್ಣವಾಗಿ ಬದ್ಧರಾಗಿದ್ದಾರೆ ಎಂದು ತಿಳಿಸಿದರು.
ಇದೇ ವೇಳೆ ಮಾಜಿ ಸಂಸದ ಕೆ. ವಿರೂಪಾಕ್ಷಪ್ಪ ಅವರನ್ನು ಮತ್ತೆ ಪಕ್ಷಕ್ಕೆ ಕರೆತರಲಾಗುತ್ತದೆಯೇ ಎಂಬ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಅವರು, ವಿರೂಪಾಕ್ಷಪ್ಪ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಜೊತೆ ಉತ್ತಮ ವೈಯಕ್ತಿಕ ಹಾಗೂ ರಾಜಕೀಯ ಬಾಂಧವ್ಯವನ್ನು ಹೊಂದಿದ್ದಾರೆ. ಪಕ್ಷದ ತತ್ವ ಹಾಗೂ ಸಿದ್ಧಾಂತಗಳನ್ನು ಒಪ್ಪಿ ಯಾರೇ ಬಂದರೂ ಅವರಿಗೆ ಕಾಂಗ್ರೆಸ್ ಪಕ್ಷದಲ್ಲಿ ಸದಾ ಸ್ವಾಗತವಿರುತ್ತದೆ ಎಂದು ಮಾರ್ಮಿಕವಾಗಿ ಉತ್ತರಿಸಿದರು.








