ಬೆಳಗಾವಿ: ಹಿರಿಯ ವೈದ್ಯರೊಬ್ಬರು ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಗಾವಿ ಟಿಳಕವಾಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಶುಕ್ರವಾರ ಬೆಳಗ್ಗೆ ನಡೆದಿದೆ. ಡಾ. ದಿನೇಶ್ ಲಕ್ಷ್ಮಣ ಭಟ್ಕಳ (79) ಆತ್ಮಹತ್ಯೆ ಮಾಡಿಕೊಂಡ ವೈದ್ಯ. ಮಂಡೋಳಿ ರಸ್ತೆಯಲ್ಲಿರುವ ಗೋಡ್ಸೆವಾಡಿಯಲ್ಲಿರುವ ಮನೆಯಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ.
ಮೃತರು ಮೂಲತಃ ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನವರಾಗಿದ್ದು, ಹಲವು ವರ್ಷಗಳಿಂದ ವೈದ್ಯರಾಗಿ ಸೇವೆ ಸಲ್ಲಿಸಿ, ನಂತರ ಬೆಳಗಾವಿಯಲ್ಲಿ ನೆಲೆಸಿದ್ದರು. ಡಾ. ಭಟ್ಕಳ ಅವರು ತಮ್ಮ ಮನೆಯ ಬಾಲ್ಕನಿಯಲ್ಲಿ ತಾವೇ ತಮ್ಮ ಮೇಲೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಗುಂಡಿನ ಸದ್ದು ಕೇಳಿ ಮನೆಯವರು ಹಾಗೂ ಸುತ್ತಮುತ್ತಲಿನ ನಿವಾಸಿಗಳು ಸ್ಥಳಕ್ಕೆ ಧಾವಿಸಿದಾಗ ಘಟನೆ ಬೆಳಕಿಗೆ ಬಂದಿದೆ. ಆದರೆ, ಅಷ್ಟರಲ್ಲಾಗಲೇ ಅವರು ಸಾವನ್ನಪ್ಪಿದ್ದರು.
ಸ್ಥಳಕ್ಕೆ ಟಿಳಕವಾಡಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಅನಾರೋಗ್ಯ ಹಾಗೂ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಹಿನ್ನೆಲೆ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ. ಆದರೆ, ನಿಖರವಾದ ಕಾರಣ ಪೊಲೀಸರ ತನಿಖೆಯಿಂದಲೇ ಸ್ಪಷ್ಟವಾಗಲಿದೆ.








