ಬೆಂಗಳೂರು : ಮುಖ್ಯಮಂತ್ರಿ ಸಿದ್ಧರಾಮಯ್ಯ ವಿರುದ್ಧದ ಮುಡಾ ಹಗರಣ ಸಂಬಂಧ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ನೀಡಿದ್ದಂತ ಅನುಮತಿ ಪ್ರಶ್ನಿಸಿ ಸಲ್ಲಿಸಿದ್ದಂತ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದ್ದು, ಇದೀಗ ಈ ಒಂದು ತೀರ್ಪಿನ ಬಗ್ಗೆ ಸಿದ್ಧರಾಮಯ್ಯ ಮೊದಲ ಪ್ರತಿಕ್ರಿಯೆ ನೀಡಿದ್ದು, ನಾನು ಯಾವುದೇ ತನಿಖೆಗೆ ಹಿಂಜರಿಯುವುದಿಲ್ಲ ಎಂದು ತಿಳಿಸಿದರು.
ಈ ಕುರಿತು ಮಾಧ್ಯಮ ಪ್ರಕಟಣೆ ಹೊರಡಿಸಿದ ಅವರು, ಹೈಕೋರ್ಟ್ ಆದೇಶದ ಅಂಶಗಳನ್ನು ತಿಳಿದುಕೊಂಡಿದ್ದೇನೆ. ಆದೇಶ ಪ್ರತಿ ಪಡೆದು ಓದಿದ ಬಳಿಕ ಪ್ರತಿಕ್ರಿಯೆ ನೀಡುತ್ತೇನೆ. ರಾಜ್ಯಪಾಲರು ನೀಡಿದ ಅಭಿಯೋಜನೆಯನ್ನು ಕೋರ್ಟ್ ತಿರಸ್ಕರಿಸಿದೆ.
ರಾಜ್ಯಪಾಲರ ಆದೇಶದಲ್ಲಿನ ಸೆಕ್ಷನ್ 17A ಗೆ ಮಾತ್ರ ಸೀಮಿತವಾಗಿದೆ. ಕಾನೂನಿನ ಅಡಿ ಅಂತಹ ತನಿಖೆಗೆ ಅವಕಾಶ ಇದೆಯೋ ಇಲ್ಲವೋ ಎಂಬುವುದರ ಕುರಿತು ಚರ್ಚಿಸಲಾಗುತ್ತದೆ. ಈ ಬಗ್ಗೆ ತಜ್ಞರ ಜೊತೆ ಸಮಾಲೋಚನೆ ಮಾಡುತ್ತೇನೆ.ನಾನು ಯಾವುದೇ ತನಿಖೆಗೆ ಹಿಂಜರಿಯುವುದಿಲ್ಲ.ಕಾನೂನು ತಜ್ಞರ ಜೊತೆಗೆ ಚರ್ಚಿಸಿ ಹೋರಾಟದ ರೂಪರೇಷೆ ನಿರ್ಧರಿಸುತ್ತೇನೆ.
ಮುಂದಿನ ದಿನಗಳಲ್ಲಿ ಸತ್ಯ ಹೊರಬಂದು ತನಿಖೆ ರದ್ದಾಗುವ ವಿಶ್ವಾಸವಿದೆ. 17A ಅಡಿ ನೀಡಿರುವ ತನಿಖೆ ರದ್ದಾಗಲಿದೆ ಎಂಬ ದೃಢ ವಿಶ್ವಾಸ ನನಗಿದೆ.ಈ ರಾಜಕೀಯ ಹೋರಾಟದಲ್ಲಿ ರಾಜ್ಯದ ಜನ ನನ್ನ ಹಿಂದೆ ಇದ್ದಾರೆ. ಕಾನೂನು ಮತ್ತು ಸಂವಿಧಾನದಲ್ಲಿ ನನಗೆ ನಂಬಿಕೆ ಇದ್ದು ರಾಜ್ಯದ ಜನರ ಆಶೀರ್ವಾದವೇ ನನಗೆ ಶ್ರೀ ರಕ್ಷೆ ಇದೆ ಈ ಹೋರಾಟದಲ್ಲಿ ಅಂತಿಮವಾಗಿ ಸತ್ಯಕ್ಕೆ ಜಯ ಸಿಗಲಿದೆ ಎಂದು ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.