ಹುಬ್ಬಳ್ಳಿ : ಇಂದು ಬಿಜೆಪಿಯ ಸಿಪಿ ಯೋಗೇಶ್ವರ್ ಅವರು ಹುಬ್ಬಳ್ಳಿಯಲ್ಲಿ ಸಭಾಪತಿ ಬಸವರಾಜ್ ಹೊರಟ್ಟಿ ಅವರನ್ನು ಭೇಟಿಯಾಗಿ ತಮ್ಮ ವಿಧಾನ ಪರಿಷತ್ ಸ್ಥಾನಕ್ಕೆ ಒಂದೇ ಸಾಲಿನಲ್ಲಿ ರಾಜಿನಾಮೆ ನೀಡಿದ್ದಾರೆ. ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿ ನಾನು ಪಕ್ಷೇತರನಾಗಿ ಸ್ಪರ್ಧಿಸಲು ತೀರ್ಮಾನಿಸಿದ್ದೇನೆ ಎಂದು ಘೋಷಿಸಿದ್ದಾರೆ.
ಹೌದು ಚನ್ನಪಟ್ಟಣ ಉಪ ಚುನಾವಣೆಗೆ ಬಿಜೆಪಿ ಟಿಕೆಟ್ ನೀಡದ ಹಿನ್ನೆಲೆಯಲ್ಲಿ ಸಿಪಿ ಯೋಗೇಶ್ವರ್ ಅವರು ತಮ್ಮ ಎಂಎಲ್ಸಿ ಸ್ಥಾನಕ್ಕೆ ಇಂದು ಹುಬ್ಬಳ್ಳಿಗೆ ಆಗಮಿಸಿ ಸಭಾಪತಿ ಬಸವರಾಜ್ ಹೊರಟ್ಟಿ ಅವರನ್ನು ಭೇಟಿಯಾಗಿ ರಾಜೀನಾಮೆ ಸಲ್ಲಿಸಿದ್ದಾರೆ. ರಾಜೀನಾಮೆ ಬಳಿಕ ಸಿಪಿ ಯೋಗೇಶ್ವರ್ ಹೇಳಿಕೆ ನೀಡಿದ್ದು ಪಕ್ಷೇತರರಾಗಿ ಸ್ಪರ್ಧಿಸಲ ತೀರ್ಮಾನಿಸಿದ್ದೇನೆ ಎಂದು ತಿಳಿಸಿದ್ದಾರೆ.
ಚುನಾವಣೆಗೆ ಸ್ಪರ್ಧಿಸಬೇಕಾದರೆ ರಾಜೀನಾಮೆ ನೀಡಬೇಕಾಗಿರುತ್ತದೆ. ಹಾಗಾಗಿ ಪರಿಷತ್ ನಾಮನಿರ್ದೇಶಿತ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ. ಪರಿಷತ್ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದೇನೆ ಅಷ್ಟೇ. ನಾನಿನ್ನು ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿಲ್ಲ. ವಿಧಾನ ಪರಿಷತ್ ಸದಸ್ಯತ್ವಕ್ಕೆ ನಾನು ರಾಜೀನಾಮೆ ಕೊಟ್ಟಿದ್ದೇನೆ. ಸಭಾಪತಿ ಬಸವರಾಜ ಹೊರಟ್ಟಿ ಅವರು ರಾಜೀನಾಮೆ ಅಂಗೀಕರಿಸಿದ್ದಾರೆ. ನಾನು ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಲು ತೀರ್ಮಾನಿಸಿದ್ದೇನೆ ಎಂದು ತಿಳಿಸಿದರು.
ಈಗಾಗಲೇ ಡಿಕೆ ಬ್ರದರ್ಸ್ ಸಿಪಿ ಯೋಗೇಶ್ವರ್ ಅವರನ್ನು ತಮ್ಮ ಆಪ್ತ ಶಾಸಕರೊಂದಿಗೆ ಸಂಪರ್ಕಿಸಿದ್ದಾರೆ ಎಂದು ಹೇಳಲಾಗುತ್ತಿತ್ತು. ಅಲ್ಲದೆ ಅವರನ್ನು ಕಾಂಗ್ರೆಸ್ ಗೆ ಕರೆತಂದು ಕಾಂಗ್ರೆಸ್ನಿಂದ ಚನ್ನಪಟ್ಟಣ ಕ್ಷೇತ್ರದಲ್ಲಿ ಕಣಕ್ಕೆ ಇಳಿಸಲು ಪ್ಲಾನ್ ಮಾಡಲಾಗಿತ್ತು. ಇದೀಗ ಸಿಪಿ ಯೋಗೇಶ್ವರ್ ಅವರು ಪಕ್ಷೇತರನಾಗಿ ಸ್ಪರ್ಧಿಸುತ್ತೇನೆ ಎಂದು ಹೇಳುವ ಮೂಲಕ ಎಲ್ಲಾ ಊಹಾಪೋಹಗಳಿಗೆ ತೆರೆ ಎಳೆದಿದ್ದಾರೆ.