ಬೆಂಗಳೂರು: ಬೇಲೆಕೇರಿ ಅದಿರು ಅಕ್ರಮವಾಗಿ ವಿದೇಶಕ್ಕೆೆ ಸಾಗಾಟ ಮಾಡಿದ ಆರೋಪ ಪ್ರಕರಣದಲ್ಲಿ ಬಂಧಿತರಾಗಿರುವ ಕಾರವಾರ-ಅಂಕೋಲಾ ಕ್ಷೇತ್ರದ ಕಾಂಗ್ರೆಸ್ ಶಾಸಕ ಸತೀಶ್ ಸೈಲ್‌ಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಅನಾರೋಗ್ಯ ಹಿನ್ನೆಲೆಯಲ್ಲಿ 7 ದಿನಗಳ ಮಧ್ಯಂತರ ಜಾಮೀನು ನೀಡಿ, ಗುರುವಾರ ಆದೇಶ ಹೊರಡಿಸಿದೆ.
ಸತೀಶ್ ಸೈಲ್ ಅವರನ್ನು ಬಂಧಿಸಿದ್ದ ಜಾರಿ ನಿರ್ದೇಶನಾಲಯ (ಇ.ಡಿ.)ದ ಅಧಿಕಾರಿಗಳು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆೆ ಬುಧವಾರ ಹಾಜರುಪಡಿಸಿದ್ದರು. ವಿಚಾರಣೆ ನಡೆಸಿದ ನ್ಯಾಯಾಧೀಶರಾದ ಸಂತೋಷ್ ಗಜಾನನ ಭಟ್ ಆರೋಪಿ ಸೈಲ್ ಅವರನ್ನು ಸೆಪ್ಟೆಂಬರ್ 12ರ ವರೆಗೆ ಇ.ಡಿ ವಶಕ್ಕೆ ನೀಡಿ ಆದೇಶಿಸಿದ್ದರು.
ಪ್ರಕರಣ ಹಿನ್ನೆಲೆ?
ಉತ್ತರ ಕನ್ನಡ ಜಿಲ್ಲೆಯ ಬೇಲೇಕೇರಿ ಬಂದರಿನಲ್ಲಿ ವಶಕ್ಕೆ ಪಡೆದು ಸಂಗ್ರಹಿಸಲಾಗಿದ್ದ ಸಾವಿರಾರು ಟನ್‌ಗಳಷ್ಟು ಕಬ್ಬಿಣದ ಅದಿರನ್ನು ಅಕ್ರಮವಾಗಿ ಸಾಗಣೆ ಮಾಡಿದ ಪ್ರಕರಣದಲ್ಲಿ ಶಾಸಕ ಸತೀಶ್ ಸೈಲ್‌ಗೆ ಈ ಹಿಂದೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಏಳು ವರ್ಷಗಳ ಕಾಲ ಜೈಲು ಶಿಕ್ಷೆ ವಿಧಿಸಿತ್ತು. ಈ ತೀರ್ಪು ಪ್ರಶ್ನಿಸಿ ಸತೀಶ್ ಸೈಲ್ ಮತ್ತಿತರರು ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ್ದ ಹೈಕೋರ್ಟ್ ಶಿಕ್ಷೆಯನ್ನು ಅಮಾನತಿನಲ್ಲಿಟ್ಟಿತ್ತು.
ಪ್ರಕರಣದಲ್ಲಿ ಅಕ್ರಮವಾಗಿ ಹಣ ವರ್ಗಾವಣೆ ಸಹ ಕಂಡುಬಂದ ಹಿನ್ನೆಲೆಯಲ್ಲಿ, ಇಸಿಐಆರ್ ದಾಖಲಿಸಿಕೊಂಡಿದ್ದ ಇ.ಡಿ ಅಧಿಕಾರಿಗಳು ಪ್ರತ್ಯೇಕ ತನಿಖೆ ಆರಂಭಿಸಿದ್ದರು. ಆಗಸ್ಟ್ 13 ಮತ್ತು 14ರಂದು ಸತೀಶ್ ಸೈಲ್ ಅವರ ಕಾರವಾರ ಮತ್ತು ಬೆಂಗಳೂರಿನ ಮನೆಗಳ ಮೇಲೆ ದಾಳಿ ನಡೆಸಿದಾಗ ನಗದು, ಚಿನ್ನಾಭರಣ ಸಹಿತ 13 ಕೋಟಿ ರೂ ಮೌಲ್ಯದ ವಸ್ತುಗಳು ಪತ್ತೆಯಾಗಿವೆ ಎಂದು ಇ.ಡಿ ಅಧಿಕಾರಿಗಳು ತಿಳಿಸಿದ್ದರು. ಬಳಿಕ ಈ ಸಂಬಂಧ ವಿಚಾರಣೆಗೆ ಹಾಜರಾಗುವಂತೆ ಇ.ಡಿ ಅಧಿಕಾರಿಗಳು ಸತೀಶ್ ಸೈಲ್ ಅವರಿಗೆ ನೋಟಿಸ್ ನೀಡಿದ್ದರು.








