ಬೆಳಗಾವಿ : ಬೆಂಗಳೂರಲ್ಲಿ ಎಟಿಎಂಗೆ ಹಣ ಸಾಗಿಸುತ್ತಿದ್ದ ವಾಹನ ಅಡ್ಡಗಟ್ಟಿ ಹಾಡಹಗಲೇ ದರೋಡೆ ಸೇರಿ, ಕೋರಮಂಗಲದ ಕಾಲ್ಸೆಂಟರ್ನ ಉದ್ಯೋಗಿಗಳ ಕಿಡ್ನ್ಯಾಪ್ ಕೇಸ್ಗಳಲ್ಲಿಯೂ ಪೊಲೀಸ್ ಸಿಬ್ಬಂದಿಯೇ ಆರೋಪಿಗಳಾಗಿದ್ದರು. ಇದೀಗ ಕರ್ನಾಟಕದಲ್ಲಿ ಕಳೆದ 3 ವರ್ಷಗಳಲ್ಲಿ 88 ಪೊಲೀಸರು ದರೋಡೆ, ಅಪಹರಣ ಸೇರಿ ವಿವಿಧ ಅಪರಾಧ ಕೃತ್ಯಗಳಲ್ಲಿ ಭಾಗಿಯಾಗಿರುವುದು ಬಹಿರಂಗವಾಗಿದೆ.
ಬೆಳಗಾವಿಯಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ ವಿಧಾನ ಪರಿಷತ್ನ ಜೆಡಿಎಸ್ ಸದಸ್ಯ ಶರವಣ ಅವರ ಪ್ರಶ್ನೆಗೆ ಉತ್ತರಿಸಿರುವ ಗೃಹ ಸಚಿವ ಡಾ. ಜಿ. ಪರಮೇಶ್ವರ್, ರಾಜ್ಯದಲ್ಲಿ ಕಳೆದ 3 ವರ್ಷಗಳ ಅವಧಿಯಲ್ಲಿ ಒಟ್ಟು 88 ಪೊಲೀಸರು ಅಪರಾಧ ಕೃತ್ಯಗಳಲ್ಲಿ ಭಾಗಿಯಾಗಿದ್ದಾರೆ ಎಂದು ಅಂಕಿ-ಅಂಶ ಸಮೇತ ಮಾಹಿತಿ ನೀಡಿದ್ದಾರೆ. ಗೃಹಸಚಿವರ ಉತ್ತರದ ಬೆನ್ನಲ್ಲೇ ಈ ಬಗ್ಗೆ ಶರವಣ ಅವರು ಈ ಬಗ್ಗೆ ಆತಂಕ ವ್ಯಕ್ತಪಡಿಸಿದ್ದಾರೆ.
ಪೊಲೀಸರೇ ದರೋಡೆ, ಕಳ್ಳತನ ಪ್ರಕರಣಗಳಲ್ಲಿ ಭಾಗಿಯಾಗುತ್ತಿದ್ದಾರೆ. ರಕ್ಷಕರೇ ಭಕ್ಷಕರಾಗುತ್ತಿರುವ ಕಾರಣ ಪೊಲೀಸರ ಮೇಲೆ ಜನ ವಿಶ್ವಾಸವನ್ನೇ ಕಳೆದುಕೊಳ್ಳುತ್ತಿದ್ದಾರೆ ಎಂದಿದ್ದಾರೆ. ಜೊತೆಗೆ ಅಪರಾಧ ಪ್ರಕರಣದಲ್ಲಿ ಭಾಗಿಯಾದ ಪೊಲೀಸರನ್ನು ಅಮಾನತು ಮಾಡುವುದಲ್ಲ, ಕೆಲಸದಿಂದಲೇ ವಜಾಗೊಳಿಸಬೇಕು ಎಂದು ಆಗ್ರಹಿಸಿದ್ದಾರೆ.








