ಬೆಂಗಳೂರು : ಪಹಲ್ಗಾಮ್‌ನಲ್ಲಿ ಉಗ್ರರು ನಡೆಸಿದ ಭೀಕರ ದಾಳಿಯಲ್ಲಿ ಇಬ್ಬರು ಕನ್ನಡಿಗರು ಸೇರಿ 30ಕ್ಕೂ ಅಧಿಕ ಪ್ರವಾಸಿಗರು ಬಲಿಯಾಗಿದ್ದಾರೆ. ಇದರ ಬೆನ್ನಲ್ಲೆ ಕರ್ನಾಟಕದಲ್ಲಿ ರಾಜ್ಯದಾದ್ಯಂತ ಸರ್ಕಾರ ಹೈ ಅಲರ್ಟ್ ಘೋಷಿಸಿದೆ.
ಈ ಕುರಿತು ಗೃಹ ಸಚಿವ ಜಿ.ಪರಮೇಶ್ವರ್ ಮಾತನಾಡಿ, ಕಾಶ್ಮೀರದಲ್ಲಿ ಸಂಭವಿಸಿದ ದಾಳಿಯಲ್ಲಿ ಬೃಹತ್ ಗುಪ್ತಚರ ವೈಫಲ್ಯ ನಡೆದಿರುವುದು ಸ್ಪಷ್ಟವಾಗಿದೆ. ಉಗ್ರರು ಭಾರೀ ಶಸ್ತ್ರಾಸ್ತ್ರಗಳೊಂದಿಗೆ ಮುನ್ನಡೆದು ಬಂದಿರುವುದು ಈ ವೈಫಲ್ಯವನ್ನು ತೋರುತ್ತದೆ. ಈ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ಜಾಗೃತತೆಗೆ ಹೆಚ್ಚಿನ ಒತ್ತು ನೀಡಲಾಗಿದೆ ಎಂದರು.
ಪ್ರಮುಖ ವಿಮಾನ ನಿಲ್ದಾಣಗಳು, ರೈಲು ನಿಲ್ದಾಣಗಳು, ದೇವಸ್ಥಾನಗಳು, ಮಾರುಕಟ್ಟೆಗಳು ಮತ್ತು ಜನಸಂದಣಿಯಿರುವ ಸ್ಥಳಗಳಲ್ಲಿ ಭದ್ರತೆ ಕಠಿಣಗೊಳಿಸಲಾಗಿದೆ. ರಾಜ್ಯದಲ್ಲಿ ಎಚ್ಚರಿಕೆಯ ವಾತಾವರಣ ನಿರ್ಮಾಣವಾಗಿದೆ. ಯಾವುದೇ ತುರ್ತು ಪರಿಸ್ಥಿತಿಗೆ ತಯಾರಾಗಿರಬೇಕು ಎಂದು ಡಿಜಿಪಿಗೆ ಸೂಚನೆ ನೀಡಿದ್ದೇನೆ ಎಂದು ಹೇಳಿದರು.