ಬಾಗಲಕೋಟೆ : ಬಾಗಲಕೋಟೆಯಲ್ಲಿ ಭೀಕರವಾದ ಅಪಘಾತ ಸಂಭವಿಸಿದ್ದು, ಚಾಲಕನ ನಿಯಂತ್ರಣ ತಪ್ಪಿ ಕೆಎಸ್ಆರ್ಟಿಸಿ ಬಸ್ ಒಂದು ಕಂದಕಕ್ಕೆ ಉರುಳಿ ಬಿದ್ದ ಘಟನೆ ಬಾಗಲಕೋಟೆ ಜಿಲ್ಲೆಯ ರಬಕವಿ ಬನಹಟ್ಟಿ ತಾಲ್ಲೂಕಿನ ಹಿಪ್ಪರಗಿ ಸೇತುವೆ ಬಳಿ ನಡೆದಿದೆ.
ಅಥಣಿಯಿಂದ ಜಮಖಂಡಿಗೆ ಕೆಎಸ್‌ಆರ್‌ಟಿಸಿ ಬಸ್ ಬರುತ್ತಿತ್ತು. ಈ ವೇಳೆ ರಸ್ತೆಯ ಬ್ರೇಕರ್ ದಾಟಿಸುವ ವೇಳೆ ಬಸ್‌ನ ಪಾಟಾ ಮುರಿದಿದ್ದು ಈ ಅಪಘಾತಕ್ಕೆ ಕಾರಣವೆಂದು ತಿಳಿದುಬಂದಿದೆ. ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸದೇ ಭಾರೀ ಅನಾಹುತವೊಂದು ತಪ್ಪಿದೆ.
ಬಸ್‌ನಲ್ಲಿ ಏಳೆಂಟು ಪ್ರಯಾಣಿಕರಿದ್ದು, ಅವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಘಟನೆಯ ನಂತರ ಬಸ್‌ನ ಹಿಂಬದಿಯ ಗಾಜು ಒಡೆದು ಸ್ಥಳೀಯರು ಪ್ರಯಾಣಿಕರನ್ನು ರಕ್ಷಿಸಿದ್ದಾರೆ. ಗಾಯಗೊಂಡ ಪ್ರಯಾಣಿಕರನ್ನು ಜಮಖಂಡಿ ತಾಲ್ಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನೆ ಕುರಿತು ಜಮಖಂಡಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.