ಹಾವೇರಿ: ಜಿಲ್ಲೆಯ ರಾಣೆಬೆನ್ನೂರು ತಾಲೂಕಿನ ದೇವರಗುಡ್ಡ ಗ್ರಾಮದ ಸಮೀಪ ರಾಜ್ಯ ಹೆದ್ದಾರಿಯಲ್ಲಿ ಇಂದು ಮುಂಜಾನೆ ಕೆಎಸ್‌ಆರ್‌ಟಿಸಿ ಬಸ್ ಬೆಂಕಿಗಾಹುತಿಯಾದ ಘಟನೆ ನಡೆದಿದೆ. ಬೆಂಗಳೂರಿನಿಂದ ಗದಗಕ್ಕೆ ಪ್ರಯಾಣಿಸುತ್ತಿದ್ದ ಬಸ್‌ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದ್ದು, ನೋಡನೋಡುತ್ತಿದ್ದಂತೆಯೇ ಬಸ್ ಸಂಪೂರ್ಣ ಜ್ವಾಲೆಗೆ ಆಹುತಿಯಾಗಿದೆ.
ತಪ್ಪಿದ ಭಾರಿ ಪ್ರಾಣಾಪಾಯ
ಬಸ್‌ನಲ್ಲಿ ಬೆಂಕಿ ಕಾಣಿಸಿಕೊಂಡ ಸಮಯದಲ್ಲಿ ಒಟ್ಟು 17 ಪ್ರಯಾಣಿಕರು ಇದ್ದರು ಎನ್ನಲಾಗಿದೆ. ಬಸ್‌ನ ಎಂಜಿನ್ ಭಾಗದಲ್ಲಿ ಹೊಗೆ ಕಾಣಿಸಿಕೊಳ್ಳುತ್ತಿದ್ದಂತೆಯೇ ಎಚ್ಚೆತ್ತ ಚಾಲಕ ಪಕ್ಕೀರಪ್ಪ, ಕೂಡಲೇ ವಾಹನವನ್ನು ರಸ್ತೆ ಬದಿಗೆ ನಿಲ್ಲಿಸಿ ಪ್ರಯಾಣಿಕರನ್ನು ಕೆಳಗೆ ಇಳಿಯುವಂತೆ ಸೂಚಿಸಿದ್ದಾರೆ. ಚಾಲಕನ ಈ ಸಮಯಪ್ರಜ್ಞೆಯಿಂದಾಗಿ ಎಲ್ಲಾ 17 ಪ್ರಯಾಣಿಕರು ಯಾವುದೇ ಪ್ರಾಣಾಪಾಯವಿಲ್ಲದೆ ಸುರಕ್ಷಿತವಾಗಿ ಹೊರಬಂದಿದ್ದಾರೆ.
ನಂದಿಸಲು ಸಿಬ್ಬಂದಿ ಹರಸಾಹಸ
ಬೆಂಕಿ ಕಾಣಿಸಿಕೊಂಡ ತಕ್ಷಣ ಬಸ್ ಸಿಬ್ಬಂದಿ ಲಭ್ಯವಿದ್ದ ಅಗ್ನಿಶಾಮಕ ಉಪಕರಣಗಳ ಮೂಲಕ ಜ್ವಾಲೆಯನ್ನು ನಂದಿಸಲು ಹರಸಾಹಸ ಪಟ್ಟಿದ್ದಾರೆ. ಆದರೆ, ಬೆಂಕಿಯ ತೀವ್ರತೆ ಹೆಚ್ಚಿದ್ದರಿಂದ ಕ್ಷಣಾರ್ಧದಲ್ಲಿ ಬಸ್ ಪೂರ್ತಿಯಾಗಿ ಬೆಂಕಿಯ ಕೆನ್ನಾಲಿಗೆಗೆ ಸಿಲುಕಿದೆ. ಬಸ್‌ನ ಬಹುತೇಕ ಭಾಗ ಸುಟ್ಟು ಕರಕಲಾಗಿದ್ದು, ಪ್ರಯಾಣಿಕರ ಲಗೇಜುಗಳಿಗೂ ಹಾನಿಯಾಗಿದೆ ಎಂದು ವರದಿಯಾಗಿದೆ.
ಸ್ಥಳಕ್ಕೆ ಪೊಲೀಸರ ಭೇಟಿ
ಘಟನೆಯ ಬಗ್ಗೆ ಮಾಹಿತಿ ತಿಳಿಯುತ್ತಿದ್ದಂತೆಯೇ ರಾಣೆಬೆನ್ನೂರು ಗ್ರಾಮೀಣ ಪೊಲೀಸ್ ಠಾಣೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ಸಂಚಾರಕ್ಕೆ ಅಡ್ಡಿಯಾಗದಂತೆ ಕ್ರಮ ಕೈಗೊಂಡ ಪೊಲೀಸರು, ಬೆಂಕಿ ಅವಘಡಕ್ಕೆ ನಿಖರ ಕಾರಣವೇನು ಎಂಬ ಬಗ್ಗೆ ತನಿಖೆ ಕೈಗೊಂಡಿದ್ದಾರೆ. ಪ್ರಾಥಮಿಕ ಅಂದಾಜಿನ ಪ್ರಕಾರ ಶಾರ್ಟ್ ಸರ್ಕ್ಯೂಟ್‌ನಿಂದ ಈ ಅವಘಡ ಸಂಭವಿಸಿರಬಹುದು ಎಂದು ಶಂಕಿಸಲಾಗಿದೆ.








