ದಕ್ಷಿಣಕನ್ನಡ : ದಕ್ಷಿಣ ಕನ್ನಡ ಸೇರಿದಂತೆ ಮಲೆನಾಡು ಭಾಗದಲ್ಲಿ ಭಾರಿ ಮಳೆ ಸುರಿಯುತ್ತಿರುವುದರಿಂದ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ನೆಲ್ಯಾಡಿ ಸಮೀಪದ ಮಣ್ಣಗುಂಡಿಯಲ್ಲಿ ಇಂದು ಮತ್ತೆ ದೊಡ್ಡ ಪ್ರಮಾಣದಲ್ಲಿ ಗುಡ್ಡ ಕುಸಿದು, ಹೆದ್ದಾರಿಯೆಲ್ಲಾ ಮಣ್ಣಿನಿಂದ ಮುಚ್ಚಿಹೋಗಿದೆ. ಇದರಿಂದ ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಸಂಚಾರ ಸ್ಥಗಿತವಾಗಿದೆ.
ಈ ಪ್ರದೇಶದಲ್ಲಿ ರಸ್ತೆಯ ಚತುಷ್ಪಥ ಕಾಮಗಾರಿಯ ಹಿನ್ನೆಲೆಯಲ್ಲಿ ಅತ್ಯಂತ ಎತ್ತರದ ಗುಡ್ಡವನ್ನು ಯಾವುದೇ ಮುನ್ನೆಚ್ಚರಿಕೆಯ ಕ್ರಮವಿಲ್ಲದೇ ಕತ್ತರಿಸಲಾಗಿದೆ. ಪರಿಣಾಮವಾಗಿ ಮಳೆ ಬರುತ್ತಿದ್ದಂತೆ ಮಣ್ಣು ಸಡಿಲಗೊಂಡು ಕುಸಿದು ಬೀಳುತ್ತಿದೆ. ಇದೀಗ ಹಲವು ಬಾರಿ ಹೆದ್ದಾರಿ ಬಂದ್ ಆಗುವ ಸ್ಥಿತಿ ನಿರ್ಮಾಣವಾಗಿದೆ.
ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ನಂ 75ರ ಕಡಬ ತಾಲೂಕು ಕೌಕ್ರಾಡಿ ಗ್ರಾಮದ ಮಣ್ಣಗುಂಡಿ ಎಂಬಲ್ಲಿ, ಗುಡ್ಡ ಕುಸಿದಿದ್ದು ರಾಷ್ಟ್ರೀಯ ಹೆದ್ದಾರಿ ವಾಹನ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ. ಈಗಾಗಲೇ ಮಣ್ಣು ತೆಗೆಯುವ ಕಾರ್ಯ ಆರಂಭವಾಗಿದೆ. ಇನ್ನಷ್ಟು ಮಣ್ಣು ಕುಸಿಯುತ್ತಿದ್ದು, ತೆರವು ಕಾರ್ಯ ಮಧ್ಯಾಹ್ನದವರೆಗೆ ನಡೆಯಲಿದೆ. ಹೀಗಾಗಿ, ಈ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚರಿಸುವ ವಾಹನಗಳು ಬದಲಿ ರಸ್ತೆಯಲ್ಲಿ ಸಂಚರಿಸಬೇಕು ಎಂದು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಸೂಚನೆ ನೀಡಿದ್ದಾರೆ.