ಮಂಡ್ಯ :- ಮದ್ದೂರು ನಗರದ ಬೆಂಗಳೂರು – ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ನ.5 ರಂದು ನಡೆದಿದ್ದ ರಸ್ತೆ ಅಪಘಾತದಲ್ಲಿ ಕೃಷಿ ಇಲಾಖೆಯ ದ್ವಿತೀಯ ದರ್ಜೆ ಸಹಾಯಕಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ಭಾನುವಾರ ನಡೆದಿದೆ.
ಮದ್ದೂರು ತಾಲೂಕಿನ ಕೃಷಿ ಇಲಾಖೆ ಸಹಾಯಕ ನಿರ್ದೇಶಕರ ಕಚೇರಿಯಲ್ಲಿ ದ್ವಿತೀಯ ದರ್ಜೆ ಸಹಾಯಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಶ್ವೇತಾ ( 38 ) ಎನ್ನಲಾಗಿದೆ. ಕಳೆದ ನ.5 ರಂದು ಮಧ್ಯಾಹ್ನದ ವೇಳೆ ಮದ್ದೂರು ನಗರದ ನ್ಯಾಯಾಲಯದ ಸಂಕೀರ್ಣದ ಮುಂಭಾಗ ಶ್ವೇತಾ ಅವರು ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದ ವೇಳೆ ಹಿಂದಿನಿಂದ ಬಂದ ಮಾರುತಿ ಸುಜುಕಿ ಸ್ವಿಫ್ಟ್ ಡಿಜೈರ್ ಕಾರು ಡಿಕ್ಕಿ ಹೊಡೆದ ಪರಿಣಾಮ ಶ್ವೇತಾ ಅವರ ತಲೆ, ಕೈ ಕಾಲು ಗಂಭೀರ ಗಾಯವಾಗಿತ್ತು.
ತಕ್ಷಣವೇ ವಾಹನ ಸವಾರರು ಹಾಗೂ ಸ್ಥಳೀಯರು ಮದ್ದೂರು ಸಾರ್ವಜನಿಕ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿನ ಡಿಎಂಆರ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಸತತ ಹತ್ತು ದಿನಗಳ ಕಾಲ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಿದರೂ ಸಹ ಚಿಕಿತ್ಸೆ ಫಲಕಾರಿಯಾಗದೆ ಭಾನುವಾರ ಮುಂಜಾನೆ ಕೊನೆಯುಸಿರೆಳೆದಿದ್ದಾರೆ. ಈ ಸಂಬಂಧ ಮದ್ದೂರು ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೋಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.
ವರದಿ : ಗಿರೀಶ್ ರಾಜ್, ಮಂಡ್ಯ








