ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಅತಿವೇಗ ಮತ್ತು ಅಜಾಗರೂಕ ಚಾಲನೆಯಿಂದಾಗಿ ಹಿಟ್ ಆ್ಯಂಡ್ ರನ್ ಪ್ರಕರಣಗಳು ಆತಂಕಕಾರಿ ರೀತಿಯಲ್ಲಿ ಹೆಚ್ಚುತ್ತಿವೆ. ಇಂದು (ಶುಕ್ರವಾರ) ಮುಂಜಾನೆ ಕಬ್ಬನ್ ಪಾರ್ಕ್ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಇಂತಹದ್ದೇ ಒಂದು ಘೋರ ಅಪಘಾತದಲ್ಲಿ ವ್ಯಕ್ತಿಯೊಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಮೃತರನ್ನು ಶ್ರೀನಿವಾಸ್ ಎಂದು ಗುರುತಿಸಲಾಗಿದೆ. ಇಂದು ಮುಂಜಾನೆ ಶ್ರೀನಿವಾಸ್ ಅವರು ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ, ವೇಗವಾಗಿ ಬಂದ ಅಪರಿಚಿತ ವಾಹನವೊಂದು ಅವರಿಗೆ ಬಲವಾಗಿ ಗುದ್ದಿದೆ. ಡಿಕ್ಕಿಯ ರಭಸಕ್ಕೆ ತೀವ್ರವಾಗಿ ಗಾಯಗೊಂಡ ಶ್ರೀನಿವಾಸ್ ಅವರು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ.
ಅಪಘಾತ ಸಂಭವಿಸಿದ ತಕ್ಷಣವೇ ಮಾನವೀಯತೆ ಮರೆತ ವಾಹನ ಸವಾರ, ಗಾಯಾಳುವಿಗೆ ನೆರವಾಗುವ ಬದಲು ವಾಹನದೊಂದಿಗೆ ಸ್ಥಳದಿಂದ ಪರಾರಿಯಾಗಿದ್ದಾನೆ. ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಧಾವಿಸಿದ ಕಬ್ಬನ್ ಪಾರ್ಕ್ ಸಂಚಾರ ಠಾಣೆಯ ಪೊಲೀಸರು ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ.








