ಬೆಂಗಳೂರು : ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದಲ್ಲಿ ಭ್ರಷ್ಟಾಚಾರ ಹಗರಣ ಹೊರಗಡೆ ಬರುತ್ತಲೇ ಇವೆ. ಇತ್ತ ಮೈಸೂರಲ್ಲಿ ಸಾಧನ ಸಮಾವೇಶ ಮಾಡುತ್ತಿದ್ದರೆ, ಇನ್ನೊಂದು ಕಡೆ ಕಾಂಗ್ರೆಸ್ ಸರ್ಕಾರದ ಭ್ರಷ್ಟಾಚಾರದ ಕುರಿತು ಬಿಜೆಪಿ ಹೋರಾಟ ಮಾಡುತ್ತಿದೆ. ಇದೀಗ ಸ್ಮಾರ್ಟ್ ವಿದ್ಯುತ್ ಮೀಟರ್ ವಿಚಾರದಲ್ಲಿ ಭ್ರಷ್ಟಾಚಾರ ನಡೆದಿದೆ ಎಂದು ಇಂಧನ ಇಲಾಖೆ ವಿರುದ್ಧ ಬಿಜೆಪಿ ಸಮರ ಸಾರಿತ್ತು. ಈ ಹಿಂದೆ ಲೋಕಾಯುಕ್ತ ಡಿವೈಎಸ್ಪಿಗೆ ದೂರು ನೀಡಿದ್ದ ಬಿಜೆಪಿ ಶಾಸಕರು ಇದೀಗ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಖಾಸಗಿ ದೂರು ದಾಖಲಿಸಿದ್ದಾರೆ.
ಸ್ಮಾರ್ಟ್ ಮೀಟರ್ ಟೆಂಡರ್ ಸುಮಾರ್ 10 ಸಾವಿರ ಕೋಟಿ ರೂಪಾಯಿ ಮೊತ್ತದ ದೊಡ್ಡ ಟೆಂಡರ್ ಆಗಿರುವುದರಿಂದ ಜಾಗತಿಕ ಟೆಂಡರ್ ಕರೆಯಬೇಕಿತ್ತು. ಆದರೆ ಹಾಗೆ ಮಾಡದೆ ಕೇವಲ 354 ಕೋಟಿ ರೂ. ವ್ಯವಹಾರ ನಡೆಸುವ ರಾಜಶ್ರೀ ಎಲೆಕ್ಟ್ರಿಕಲ್ಸ್ಗೆ ಟೆಂಡರ್ ನೀಡಲಾಗಿದೆ. 10 ವರ್ಷಕ್ಕೆ 5296 ಕೋಟಿ ರೂಪಾಯಿಗೆ ನೀಡಲಾಗಿರುವ ಟೆಂಡರ್ ಅನ್ನು ಬೇಕೆಂದೇ 997 ಕೋಟಿ ರೂ. ಟೆಂಡರ್ ಎಂಬಂತೆ ಬಿಂಬಿಸಿ ರಾಜಶ್ರೀ ಎಲೆಕ್ಟ್ರಿಕಲ್ಸ್ ಕಂಪೆನಿಗೆ ನೀಡಲಾಗಿದೆ.
ಬೆಸ್ಕಾಂ ವ್ಯಾಪ್ತಿಗೆ ಮಾತ್ರ ಈ ಟೆಂಡರ್ ಕರೆಯಲಾಗಿದ್ದರೂ ಬೆಸ್ಕಾಂ ಇತರೆ ಎಸ್ಕಾಂಗಳಿಗೂ ಇದೇ ಸ್ಮಾರ್ಟ್ ಮೀಟರ್ ಖರೀದಿಸಿರುವಂತೆ ಸೂಚಿಸಿರುವುದು ಸಂಪೂರ್ಣ ಕಾನೂನುಬಾಹಿರ ಹಾಗೂ ಅಕ್ರಮವಾಗಿದೆ. ಕೇಂದ್ರ ಸರ್ಕಾರದ ಆರ್‌ಡಿಎಸ್‌ಎಸ್ ಯೋಜನೆಯಡಿ 900 ರೂಪಾಯಿಗೆ ಸಿಗುವ ಮೀಟರ್ ಅನ್ನು 5 ಸಾವಿರದಿಂದ 8,800 ರೂಪಾಯಿಗಳಿಗೆ ಗ್ರಾಹಕರು ಖರೀದಿಸಬೇಕಾದ ಅನಿವಾರ್ಯತೆ ತಂದೊಡ್ಡಿದ್ದಾರೆ.
ಇದಕ್ಕೆಲ್ಲಾ ಬೆಸ್ಕಾಂ ಅಧ್ಯಕ್ಷ ಹಾಗೂ ಇಂಧನ ಸಚಿವ ಕೆ.ಜೆ.ಜಾರ್ಜ್ ಹಾಗೂ ಇತರೆ ಅಧಿಕಾರಿಗಳೇ ಹೊಣೆ. ತನಿಖೆ ಅನುಮತಿಗಾಗಿ ರಾಜ್ಯಪಾಲರಿಗೂ ಮನವಿ ಸಲ್ಲಿಸಲಾಗಿದೆ. ಲೋಕಾಯುಕ್ತ ಡಿವೈಎಸ್‌ಪಿ ಗೆ ದೂರು ನೀಡಿದರೂ ಎಫ್‌ಐಆರ್ ದಾಖಲಿಸಿಲ್ಲ. ಹೀಗಾಗಿ ಎಫ್‌ಐಆರ್ ದಾಖಲಿಸಿ ತನಿಖೆ ನಡೆಸುವಂತೆ ಆದೇಶಿಸಬೇಕು ಎಂದು ಬಿಜೆಪಿ ನಾಯಕರು ಸಲ್ಲಿಸಿರುವ ಖಾಸಗಿ ದೂರಿನಲ್ಲಿ ಉಲ್ಲೇಖಿಸಲಾಗಿದೆ.