ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸುವ ಮತ್ತೊಂದು ಮಹತ್ವದ ವಿದ್ಯಮಾನ ಜರುಗಿದ್ದು,ಡಿ.ಕೆ.ಶಿವಕುಮಾರ ಸಂಪುಟದಲ್ಲಿ ಸಚಿವ ಸ್ಥಾನ ಫಿಕ್ಸ್ ಆದ ಹಿನ್ನೆಲೆಯಲ್ಲಿ ಇಂದು ವಿಧಾನಸಭಾ ಸ್ಪೀಕರ್ ಸ್ಥಾನಕ್ಕೆ ಯು.ಟಿ. ಖಾದರ್ ಅವರು ರಾಜೀನಾಮೆ ನೀಡಿದ್ದಾರೆ.
ರಾಜ್ಯ ಸಚಿವ ಸಂಪುಟದಲ್ಲಿ ತಮಗೆ ಸಚಿವ ಸ್ಥಾನ ಸಿಗುವ ಬಗ್ಗೆ ಅಧಿಕೃತ ಮಾಹಿತಿ ಲಭ್ಯವಾದ ತಕ್ಷಣವೇ ಖಾದರ್ ಅವರು ತಮ್ಮ ಸ್ಪೀಕರ್ ಹುದ್ದೆಗೆ ರಾಜೀನಾಮೆ ಸಲ್ಲಿಸಿದ್ದಾರೆ.
ವರದಿಗಳ ಪ್ರಕಾರ, ಯು.ಟಿ. ಖಾದರ್ ಅವರು ಇಂದು ವಿಧಾನಸಭೆಯ ಉಪಸಭಾಪತಿಗಳಿಗೆ (ಡೆಪ್ಯುಟಿ ಸ್ಪೀಕರ್) ತಮ್ಮ ರಾಜೀನಾಮೆ ಪತ್ರವನ್ನು ಸಲ್ಲಿಸಲಿದ್ದಾರೆ ಎನ್ನಲಾಗಿದೆ. ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಇಂದು ಅಧಿಕಾರ ಸ್ವೀಕರಿಸಿದ್ದಾರೆ. ಸಿಎಂ ಪ್ರಮಾಣವಚನ ಬೆನ್ನಲ್ಲೇ ಸಂಪುಟ ವಿಸ್ತರಣೆ ಕಸರತ್ತು ಚುರುಕಾಗಿದ್ದು, ಡಿ.ಕೆ. ಶಿವಕುಮಾರ್ ಅವರ ಜೊತೆಗೆ ಸುಮಾರು 12 ರಿಂದ 13 ಮಂದಿ ಶಾಸಕರು ಸಚಿವರಾಗಿ ಪ್ರಮಾಣವಚನ ಸ್ವೀಕರಿಸುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಹಿರಿಯ ನಾಯಕ ಯು.ಟಿ. ಖಾದರ್ ಅವರಿಗೆ ಸಚಿವ ಫಿಕ್ಸ್ ಎನ್ನಲಾಗುತ್ತಿದ್ದು, ಇದಕ್ಕಾಗಿ ಅವರು ತಮ್ಮ ಸ್ಪೀಕರ್ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ ಎನ್ನಲಾಗಿದೆ.








