ಬೆಂಗಳೂರು : ತೆಕ್ಕಾರು ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಬ್ರಹ್ಮ ಕಲಶೋತ್ಸವದಲ್ಲಿ ಬಿಜೆಪಿ ಶಾಸಕ ಹರೀಶ್ ಪೂಂಜಾ ಪ್ರಚೋದನಕಾರಿ ಭಾಷಣ ಮಾಡಿದ್ದಾರೆ ಎಂದು ಆರೋಪಿಸಿ ಇತ್ತೀಚಿಗೆ ಅವರ ವಿರುದ್ಧ FIR ದಾಖಲಾಗಿತ್ತು. ಇದೀಗ ಎಫ್ಐಆರ್ ರದ್ದು ಪಡಿಸುವಂತೆ ಹೈಕೋರ್ಟಿಗೆ ಶಾಸಕ ಹರೀಶ್ ಪೂಂಜಾ ಅರ್ಜಿ ಸಲ್ಲಿಸಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿ ಠಾಣೆಯಲ್ಲಿ ದಾಖಲಾಗಿರುವ ಎಫ್‌ಐಆರ್ ಮತ್ತು ಸಂಬಂಧಿಸಿದ ವಿಚಾರಣಾ ಪ್ರಕ್ರಿಯೆ ರದ್ಧತಿ ಕೋರಿ ಬೆಳ್ತಂಗಡಿ ಬಿಜೆಪಿ ಶಾಸಕ ಹರೀಶ್ ಪೂಂಜಾ ಇದೀಗ ಹೈಕೋರ್ಟ್ ಮೆಟ್ಟಿಲೇರಿದ್ದು, ಹರೀಶ್ ಪೂಂಜಾ ಸಲ್ಲಿಸಿರುವ ಅರ್ಜಿಯನ್ನು ವಿಚಾರಣೆಗೆ ಪರಿಗಣಿಸುವಂತೆ ಅವರ ಪರ ವಕೀಲರು ನ್ಯಾಯಮೂರ್ತಿ ವಿ.ಶ್ರೀಶಾನಂದ ಅವರ ಮುಂದೆ ಪ್ರಸ್ತಾಪಿಸಿದರು.
ಇದಕ್ಕೆ ಪೀಠ, ಇದು ಜನಪ್ರತಿನಿಧಿಗೆ ಸಂಬಂಧಿಸಿದ ಪ್ರಕರಣವಾಗಿದ್ದು, ಈ ನ್ಯಾಯಾಲಯಕ್ಕೆ ಆ ವ್ಯಾಪ್ತಿ ಇಲ್ಲ. ಈ ಸಂಬಂಧ ಮುಖ್ಯ ನ್ಯಾಯಮೂರ್ತಿಗಳಿಂದ ನಿರ್ದೇಶನ ಪಡೆದು, ಆದೇಶವಾದರೆ ಅರ್ಜಿಯನ್ನು ವಿಚಾರಣೆಗೆ ಕೈಗೆತ್ತಿಕೊಳ್ಳಲಾಗುವುದು ಎಂದು ತಿಳಿಸಿ ವಿಚಾರಣೆ ಮುಂದೂಡಿತು.