ಬೆಂಗಳೂರು : 24 ಗಂಟೆಗಳಲ್ಲಿ ಕೇರಳಕ್ಕೆ ಮುಂಗಾರು ಪ್ರವೇಶವಾಗಲಿದ್ದು, 16 ವರ್ಷಗಳ ನಂತರ ಮೊದಲಬಾರಿಗೆ ಅವಧಿಗಿಂತ ಮೊದಲು ರಾಜ್ಯದಲ್ಲಿ ಮಳೆಯಾಗಲಿದೆ.
ಕೇರಳಕ್ಕೆ ಮುಂಗಾರು ಪ್ರವೇಶದ ಹಿನ್ನೆಲೆಯಲ್ಲಿ ಕರ್ನಾಟಕದಲ್ಲೂ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿಯ ಮೂರೂ ಜಿಲ್ಲೆಗಳಿಗೆ ಶನಿವಾರದಿಂದ ಒಂದು ವಾರ ರೆಡ್ ಅಲರ್ಟ್ ಘೋಷಿಸಲಾಗಿದೆ. ಗಂಟೆಗೆ 50 ಕಿ.ಮೀ. ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇರುವುದರಿಂದ ಮೀನುಗಾರರು ಸಮುದ್ರಕ್ಕೆ ಇಳಿಯುದಂತೆ ಸೂಚಿಸಲಾಗಿದೆ. ಹೀಗಾಗಿ ಮೀನುಗಾರರು ವಾಪಸಾಗಿದ್ದಾರೆ.
ಇಂದಿನಿಂದ ಮೇ 28ರ ವರೆಗೆ ಶಿವಮೊಗ್ಗ ಸೇರಿದಂತೆ ಕರಾವಳಿಯ ಮೂರು ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದ್ದು, ‘ಆರೆಂಜ್ ಅಲರ್ಟ್’ ಘೋಷಿಸಲಾಗಿದೆ. ಮುಂದಿನ ಐದು ದಿನ ಗದಗ, ಹಾವೇರಿ, ಕಲಬುರಗಿ, ವಿಜಯಪುರ, ಬಳ್ಳಾರಿ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಕೋಲಾರ, ಶಿವಮೊಗ್ಗ ಜಿಲ್ಲೆಗಳಲ್ಲಿ ನಿರಂತರವಾಗಿ ಗುಡುಗು ಸಹಿತ ಭಾರೀ ಮಳೆ ಆಗಲಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಧಾರವಾಡ, ಉಡುಪಿ, ಶಿವಮೊಗ್ಗ, ಬೆಳಗಾವಿ, ಉತ್ತರ ಕನ್ನಡ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಅತ್ಯಧಿಕ ಭಾರೀ ಮಳೆಯಾಗಲಿದ್ದು, ಗುಡುಗು ಮಿಂಚು ಸಮೇತ ಮಳೆ ಸುರಿಯಲಿದೆ. ಈ ಸಂಬಂಧ ‘ಆರೆಂಜ್ ಅಲರ್ಟ್’ ಘೋಷಿಸಿಲಾಗಿದೆ.