ಮೈಸೂರು : ಮುಡಾ ಹಗರಣಕ್ಕೆ ಸಂಬಂಧಪಟ್ಟಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ಒಂದು ಕಡೆ ವಿಪಕ್ಷಗಳು ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿ ಎಂದು ಆಗ್ರಹಿಸುತ್ತಿದ್ದರೆ, ಇನ್ನೊಂದು ಕಡೆ ನಾನು ಯಾವುದೇ ತಪ್ಪು ಮಾಡಿಲ್ಲ ಯಾವುದೇ ಕಾರಣಕ್ಕೂ ರಾಜೀನಾಮೆ ನೀಡಲ್ಲ ಎಂದು ಸಿಎಂ ಸಿದ್ದರಾಮಯ್ಯ ಅವರು ಪದೇ ಪದೇ ಹೇಳಿಕೆ ನೀಡುತ್ತಿದ್ದಾರೆ. ಇದರ ಮಧ್ಯ ಮುಡಾಗೆ ಆಡಳಿತಾಧಿಕಾರಿ ನೇಮಕಕ್ಕೆ ರಾಜ್ಯ ಸರಕಾರ ಮುಂದಾಗಿದೆ ಎಂದು ತಿಳಿದು ಬಂದಿದೆ.
ಹೌದು ಮುಡಾದಲ್ಲಿ ಅವ್ಯವಹಾರ ಹಾಗೂ ಕಾನೂನು ಬಾಹಿರ ಚಟುವಟಿಕೆ ಆರೋಪ ಹಿನ್ನೆಲೆಯಲ್ಲಿ ಮುಡಾಗೆ ಆಡಳಿತ ಅಧಿಕಾರಿ ನೇಮಕಕ್ಕೆ ರಾಜ್ಯ ಸರ್ಕಾರ ಮುಂದಾಗಿದೆ. 50:50 ಅನುಪಾತದ ಅಡಿ ನಿವೇಶನ ಹಂಚಿಕೆಯಲ್ಲಿ ಅವ್ಯವಹಾರ ಪರಿಣಾಮ ಸಿಎಂ ಸಿದ್ದರಾಮಯ್ಯ ವಿರುದ್ಧವೇ ಆರೋಪ ಕೇಳಿ ಬಂದಿತ್ತು.
ಈ ಹಿನ್ನೆಲೆಯಲ್ಲಿ ಮುಡಾ ಪ್ರಕರಣದಿಂದ ಸರ್ಕಾರ ತೀವ್ರ ಮುಜುಗರಕ್ಕೆ ಸಿಲುಕಿದೆ.ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಮರೀಗೌಡಗೆ ಸೂಚನೆ ನೀಡಲಾಗಿದ್ದು, ಯಾವುದೇ ಕ್ಷಣದಲ್ಲಿ ಕೆ ಮರಿಗೌಡ ರಾಜೀನಾಮೆ ನೀಡುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.ಹಾಗಾಗಿ ಮುಡಾಗೆ ನೂತನ ಆಡಳಿತ ಅಧಿಕಾರಿ ನೇಮಕ ಮಾಡಲು ರಾಜ್ಯ ಸರ್ಕಾರ ಮುಂದಾಗಿದೆ ಎಂದು ತಿಳಿದುಬಂದಿದೆ.