ಮಂಡ್ಯ : ಕಾವೇರಿ ಜಲಾನಯನ ಪ್ರದೇಶಗಳಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕೆಎಆರ್ಎಸ್ ಡ್ಯಾಂ ಭರ್ತಿಯಾಗಿದ್ದು, ಸದ್ಯ 50 ಸಾವಿರ ಕ್ಯೂಸೆಕ್ ನೀರು ಹೊರಬಿಡಲಾಗುತ್ತಿದೆ.
ಹೌದು, ಕೆಎಆರ್ಎಸ್ ಡ್ಯಾಂನಿಂದ ಸದ್ಯ 50 ಸಾವಿರ ಕ್ಯೂಸೆಕ್ ನೀರು ಹೊರಬಿಡಲಾಗುತ್ತಿದ್ದು, ಇದರಿಂದಾಗಿ ಕಾವೇರಿ ನದಿ ಪಾತ್ರದಲ್ಲಿ ಮತ್ತೆ ಪ್ರವಾಹ ಭೀತಿ ಎದುರಾಗಿದೆ. 124.80 ಅಡಿ ಗರಿಷ್ಠ ಸಾಮರ್ಥ್ಯವಿರುವ ಕೆಎಆರ್ಎಸ್ ಜಲಾಶಯ ಜೂನ್ ಮೊದಲ ವಾರದಲ್ಲೇ ಭರ್ತಿಯಾಗಿತ್ತು. ಇದೀಗ ಮತ್ತೆ ಭಾರೀ ಮಳೆಯಿಂದಾಗಿ ಡ್ಯಾಂನ ಒಳಹರಿವು ಹೆಚ್ಚಾಗಿದೆ.
ಕರಾವಳಿ ಸೇರಿದಂತೆ ರಾಜ್ಯಾದ್ಯಂತ ಭಾರೀ ಮಳೆಯಾಗುತ್ತಿದ್ದು, ಇನ್ನೂ ಎರಡು ದಿನ ಬಿರುಗಾಳಿ ಸಹಿತ ಭಾರೀ ಮಳೆ ಸಾಧ್ಯತೆ ಹಿನ್ನೆಲೆಯಲ್ಲಿ ಹಮಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ.
ರಾಜ್ಯದ ಕರಾವಳಿ, ಮಲೆನಾಡು ಜಿಲ್ಲೆಗಳಲ್ಲಿ ಎರಡು ದಿನ ಭಾರೀ ಮಳೆಯಾಗುವ ಮುನ್ಸೂಚನೆ ಇದ್ದು, ರೆಡ್ ಅಲರ್ಟ್ ಘೋಷಿಸಲಾಗಿದೆ. ದಕ್ಷಿಣ ಹಾಗೂ ಉತ್ತರ ಒಳನಾಡಿನ ಕೆಲ ಜಿಲ್ಲೆಗಳಲ್ಲೂ ಎರಡು ದಿನಗಳ ಕಾಲ ಭಾರೀ ಮಳೆಯ ಮುನ್ಸೂಚನೆ ಇದ್ದು, ಕೆಲ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್, ಇನ್ನು ಕೆಲ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ.
ರಾಜ್ಯಾದ್ಯಂತ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಹಿತದೃಷ್ಠಿಯಿಂದ ಕೆಲ ಜಿಲ್ಲೆಗಳ ಶಾಲಾ-ಕಾಲೇಜುಗಳಿಗೆ ಇಂದು ರಜೆ ಘೋಷಣೆ ಮಾಡಿ ಆಯಾ ಜಿಲ್ಲೆಯ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ.