ಹರಿದ್ವಾರ: ಉತ್ತರಾಖಂಡದ ಪೌರಿ ಗರ್ವಾಲ್ ಜಿಲ್ಲೆಯಲ್ಲಿ ಮಂಗಳವಾರ ಸಂಜೆ ಸುಮಾರು 45 ರಿಂದ 50 ಜನರನ್ನು ಕರೆದೊಯ್ಯುತ್ತಿದ್ದ ಬಸ್ ಕಂದಕಕ್ಕೆ ಉರುಳಿದ ಪರಿಣಾಮ 25 ಜನರು ಸಾವನ್ನಪ್ಪಿದ್ದಾರೆ ಮತ್ತು ಇತರರು ಗಾಯಗೊಂಡಿದ್ದಾರೆ ಎನ್ನಲಾಗಿದೆ.
ಧುಮಕೋಟ್ನ ಬಿರೋಖಲ್ ಪ್ರದೇಶದಲ್ಲಿ ಈ ಘಟನೆ ನಡೆದಿದ್ದು, ವಾಹನವು ಲಾಲ್ಧಾಂಗ್ನಿಂದ ಮದುವೆ ಮೆರವಣಿಗೆಯನ್ನು ಸಾಗಿಸುತ್ತಿದ್ದಾಗ ಈ ಅವಘಡ ನಡೆದಿದೆ ಎನ್ನಲಾಗಿದೆ. ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಅವರು ಡೆಹ್ರಾಡೂನ್ನ ವಿಪತ್ತು ನಿರ್ವಹಣಾ ಪ್ರಾಧಿಕಾರದ ಕಚೇರಿಗೆ ಭೇಟಿ ನೀಡಿ ಪರಿಸ್ಥಿತಿಯನ್ನು ಅವಲೋಕಿಸಿದ್ದರು.
“ಧುಮಕೋಟ್ನ ಬಿರೋಖಲ್ ಪ್ರದೇಶದಲ್ಲಿ ಕಳೆದ ರಾತ್ರಿ ನಡೆದ ಪೌರಿ ಗರ್ವಾಲ್ ಬಸ್ ಅಪಘಾತದಲ್ಲಿ 25 ಜನರು ಸಾವನ್ನಪ್ಪಿದ್ದಾರೆ. ಪೊಲೀಸರು ಮತ್ತು ಎಸ್ಡಿಆರ್ಎಫ್ ರಾತ್ರೋರಾತ್ರಿ 21 ಜನರನ್ನು ರಕ್ಷಿಸಿದೆ. ಗಾಯಗೊಂಡವರನ್ನು ಹತ್ತಿರದ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ” ಎಂದು ಡಿಜಿಪಿ ಅಶೋಕ್ ಕುಮಾರ್ ಬುಧವಾರ ಬೆಳಿಗ್ಗೆ ತಿಳಿಸಿದ್ದಾರೆ. ಅಪಘಾತದ ನಂತರ ಸ್ಥಳೀಯರ ಸಹಾಯದಿಂದ ರಕ್ಷಣಾ ಕಾರ್ಯಾಚರಣೆಯನ್ನು ಪ್ರಾರಂಭಿಸಲಾಗಿತ್ತು. ಉತ್ತರಾಖಂಡ್ ಎಸ್ಡಿಆರ್ಎಫ್ ಕಮಾಂಡೆಂಟ್ ಮಣಿಕಾಂತ್ ಮಿಶ್ರಾ ಅವರು ಈ ಹಿಂದೆ ನಾಲ್ಕು ಎಸ್ಡಿಆರ್ಎಫ್ ತಂಡಗಳು ಸ್ಥಳದಲ್ಲಿವೆ ಎಂದು ಹೇಳಿದ್ದಾರೆ.