ಬಾಂಡಾ : ಉತ್ತರ ಪ್ರದೇಶದ ಬಾಂಡಾ ಜಿಲ್ಲೆಯ ಯಮುನಾ ನದಿಯಲ್ಲಿ ಇಂದು ದೊಡ್ಡ ಅಪಘಾತ ಸಂಭವಿಸಿದ್ದು, 30ಕ್ಕೂ ಹೆಚ್ಚು ಜನರಿದ್ದ ದೋಣಿ ನದಿಯಲ್ಲಿ ಮುಳುಗಿದೆ. ಪ್ರಸ್ತುತ, 20 ಜನರು ಮುಳುಗಿ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.
ಪರಿಹಾರ ಮತ್ತು ರಕ್ಷಣಾ ಕಾರ್ಯಗಳನ್ನ ಕೈಗೊಳ್ಳುವಂತೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಜಿಲ್ಲಾಡಳಿತಕ್ಕೆ ಸೂಚನೆ ನೀಡಿದ್ದಾರೆ. ದೋಣಿ ಫತೇಪುರಕ್ಕೆ ತೆರಳುತ್ತಿದ್ದು, ಜನರನ್ನು ರಕ್ಷಿಸಲು ಪರಿಹಾರ ಕಾರ್ಯ ನಡೆಯುತ್ತಿದೆ ಎಂದು ನೈಬ್ ತಹಶೀಲ್ದಾರ್ ತಿಳಿಸಿದ್ದಾರೆ.
ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಬಾಂಡಾ ಜಿಲ್ಲೆಯ ಯಮುನಾ ನದಿಯಲ್ಲಿ ಸಂಭವಿಸಿದ ದೋಣಿ ದುರಂತಕ್ಕೆ ಸಂಬಂಧಿಸಿದಂತೆ ತಕ್ಷಣವೇ ಸ್ಥಳಕ್ಕೆ ತಲುಪಿ ರಕ್ಷಣಾ ಮತ್ತು ಪರಿಹಾರ ಕಾರ್ಯಗಳನ್ನ ಕೈಗೊಳ್ಳುವಂತೆ ಜಿಲ್ಲಾಡಳಿತಕ್ಕೆ ನಿರ್ದೇಶನ ನೀಡಿದ್ದಾರೆ. ಇನ್ನು ಅಪಘಾತದಲ್ಲಿ ಪ್ರಾಣ ಕಳೆದುಕೊಂಡ ಬಗ್ಗೆ ದುಃಖ ವ್ಯಕ್ತಪಡಿಸಿದ್ದು, ದುಃಖತಪ್ತ ಕುಟುಂಬಗಳಿಗೆ ಸಂತಾಪ ಸೂಚಿಸಿದ್ದಾರೆ. ಜಿಲ್ಲಾಧಿಕಾರಿ, ಡಿಐಜಿ, ಎನ್ಡಿಆರ್ಎಫ್ ಮತ್ತು ಎಸ್ಡಿಆರ್ಎಫ್ ತಂಡಗಳು ತಕ್ಷಣ ಸ್ಥಳಕ್ಕೆ ಧಾವಿಸುವಂತೆ ಮುಖ್ಯಮಂತ್ರಿಗಳು ನಿರ್ದೇಶನ ನೀಡಿದರು. ಅಪಘಾತದಲ್ಲಿ ಗಾಯಗೊಂಡವರಿಗೆ ಸೂಕ್ತ ಚಿಕಿತ್ಸೆ ನೀಡುವಂತೆ ಮುಖ್ಯಮಂತ್ರಿಗಳು ಸೂಚನೆ ನೀಡಿದ್ದಾರೆ.