ರಾಯ್ಪುರ: ಛತ್ತೀಸ್ಗಢದ ಶಕ್ತಿ ಜಿಲ್ಲೆಯ ಸಿಂಗಿತರೈ ಗ್ರಾಮದಲ್ಲಿರುವ ವೇದಾಂತ ಲಿಮಿಟೆಡ್ನ ವಿದ್ಯುತ್ ಸ್ಥಾವರದಲ್ಲಿ (Thermal Power Plant) ಮಂಗಳವಾರ ಮಧ್ಯಾಹ್ನ ಭೀಕರ ಬಾಯ್ಲರ್ ಸ್ಫೋಟ ಸಂಭವಿಸಿದೆ. ಈ ಘಟನೆಯಲ್ಲಿ ಒಂಬತ್ತು ಕಾರ್ಮಿಕರು ಮೃತಪಟ್ಟಿದ್ದಾರೆ ಎಂದು ಶಂಕಿಸಲಾಗಿದ್ದು, ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಇಂದು ಮಧ್ಯಾಹ್ನ ಸುಮಾರು 2 ಗಂಟೆಯ ಸುಮಾರಿಗೆ ಘಟಕದ ‘ಯೂನಿಟ್ 1’ರ ಬಾಯ್ಲರ್ ಟ್ಯೂಬ್ನಲ್ಲಿ ಈ ಸ್ಫೋಟ ಸಂಭವಿಸಿದೆ. ಸ್ಫೋಟದ ತೀವ್ರತೆಗೆ ಇಡೀ ಕಟ್ಟಡ ನಡುಗಿದ್ದು, ಕಾರ್ಮಿಕರಲ್ಲಿ ತಲ್ಲಣ ಮೂಡಿಸಿತ್ತು.
ಪ್ರಾಥಮಿಕ ವರದಿಗಳ ಪ್ರಕಾರ, ಸ್ಥಳದಲ್ಲೇ ನಾಲ್ವರು ಸಾವನ್ನಪ್ಪಿದ್ದು, ಗಾಯಗೊಂಡಿದ್ದ ಇತರ ಐವರು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಇದರಿಂದಾಗಿ ಸಾವಿನ ಸಂಖ್ಯೆ 9ಕ್ಕೇರಿದೆ ಎನ್ನಲಾಗಿದೆ. 15ಕ್ಕೂ ಹೆಚ್ಚು ಕಾರ್ಮಿಕರು ಸುಟ್ಟ ಗಾಯಗಳಿಂದ ಬಳಲುತ್ತಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ.
ಘಟನೆ ನಡೆದ ತಕ್ಷಣ ಸ್ಥಳೀಯ ಆಡಳಿತ ಮತ್ತು ಪೊಲೀಸ್ ತಂಡಗಳು ಸ್ಥಳಕ್ಕೆ ಧಾವಿಸಿವೆ. ಅವಶೇಷಗಳ ಅಡಿಯಲ್ಲಿ ಇನ್ನೂ ಕೆಲವು ಕಾರ್ಮಿಕರು ಸಿಲುಕಿಕೊಂಡಿರುವ ಭೀತಿಯಿದ್ದು, ರಕ್ಷಣಾ ಕಾರ್ಯ ಮುಂದುವರಿಯುತ್ತಿದೆ.








