ಬೆಂಗಳೂರು : ದೆಹಲಿ ಪ್ರವಾಸದಲ್ಲಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನಿನ್ನೆ ರಾಷ್ಟೀಯ ಸಂದರ್ಶನ ಒಂದರಲ್ಲಿ ಮಾತನಾಡಿ ನಾನೇ 5 ವರ್ಷಗಳ ಕಾಲ ಮುಖ್ಯಮಂತ್ರಿ ಆಗಿರುತ್ತೇನೆ. 2028ರಲ್ಲೂ ನನ್ನ ನೇತೃತ್ವದಲ್ಲಿ ಚುನಾವಣೆ ನಡೆಯಲಿದೆ ಎಂದು ಹೇಳಿಕೆ ನೀಡಿದ್ದರು. ಇದರ ಬೆನ್ನಲ್ಲೇ ಕಾಂಗ್ರೆಸ್ ಹೈಕಮಾಂಡ್ ಕೂಡ ಕರ್ನಾಟಕದಲ್ಲಿ ಯಾವುದೇ ನಾಯಕತ್ವ ಬದಲಾವಣೆ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ನವದೆಹಲಿಯಲ್ಲಿ ಸಂದರ್ಶನವೊಂದರಲ್ಲಿ ಮಾತನಾಡಿದ್ದ ಸಿದ್ದರಾಮಯ್ಯ, ಅಧಿಕಾರ ಹಂಚಿಕೆ ಬಗ್ಗೆ ಸ್ಪಷ್ಟ ಮಾತುಗಳನ್ನು ಆಡಿದ್ದರು. ರಾಹುಲ್ ಗಾಂಧಿ ಕೂಡ ಕರ್ನಾಟಕದಲ್ಲಿ ನಾಯಕತ್ವ ಬದಲಾವಣೆ ಮಾಡುವ ಮನಸ್ಥಿತಿಯಲ್ಲಿ ಇಲ್ಲ ಎಂಬುದು ಮೂಲಗಳಿಂದ ತಿಳಿದು ಬಂದಿದೆ. ಈ ಸಂದೇಶ ಸಿಕ್ಕ ನಂತರವೇ ಸಿದ್ದರಾಮಯ್ಯ ಗಟ್ಟಿ ದನಿಯಲ್ಲಿ ನಾಯಕತ್ವ ಬದಲಾವಣೆ ಇಲ್ಲ ಎಂಬ ಮಾತುಗಳನ್ನಾಡಿದ್ದಾರೆ.
ಮತ್ತೊಂದೆಡೆ, ಕಾಂಗ್ರೆಸ್ ಹೈಕಮಾಂಡ್ ಸಚಿವರ ಕಾರ್ಯ ವೈಖರಿ ಪ್ರಗತಿಯ ಪರಿಶೀಲನೆಯಲ್ಲಿ ತೊಡಗಿಕೊಂಡಿದೆ. ಈಗಾಗಲೇ ಕಾಂಗ್ರೆಸ್ ರಾಜ್ಯ ಉಸ್ತುವಾರಿ ರಣದೀರ್ ಸುರ್ಜೇವಾಲ ಬೆಂಗಳೂರಿಗೆ ಎರಡು ಬಾರಿ ಆಗಮಿಸಿದ್ದು ಶಾಸಕರ ಜೊತೆ ಪ್ರತ್ಯೇಕ ಮಾತುಕತೆ ನಡೆಸಿದ್ದಾರೆ. ಮುಂದಿನ ದಿನಗಳಲ್ಲಿ ಸಚಿವರ ಜೊತೆಗೂ ಪ್ರತ್ಯೇಕ ಮಾತುಕತೆ ನಡೆಸುವ ಸಾಧ್ಯತೆ ಇದೆ.
ಇನ್ನೊಂದಡೆ ರಾಜ್ಯದಲ್ಲಿ ಅಧಿಕಾರ ಹಂಚಿಕೆ ಕುರಿತಂತೆ ಡಿಸಿಎಂ ಡಿ.ಕೆ. ಶಿವಕುಮಾರ್ ಮತ್ತು ನನ್ನ ನಡುವೆ ಯಾವುದೇ ಒಪ್ಪಂದ ಆಗಿಲ್ಲ. ನಾಯಕತ್ವಕ್ಕಾಗಿ ಡಿ.ಕೆ. ಶಿವಕುಮಾರ್ ಮತ್ತು ನನ್ನ ನಡುವೆ ನಡೆದ ಚುನಾವಣೆಯಲ್ಲಿ ಗೆದ್ದು ನಾನು ಮುಖ್ಯಮಂತ್ರಿ ಆಗಿದ್ದೇನೆ. ನಾನೇ ಐದು ವರ್ಷ ಮುಖ್ಯಮಂತ್ರಿ ಆಗಿ ಅಧಿಕಾರ ಪೂರ್ಣಗೊಳಿಸುತ್ತೇನೆ ಎಂದು ಹೇಳಿ ಕಣಿ ಇರುವುದು ಸದ್ಯ ರಾಜ್ಯ ರಾಜಕಾರಣದಲ್ಲಿ ಭಾರಿ ಸಂಚಲನ ಸೃಷ್ಟಿಸಿದೆ.








