ಬೆಂಗಳೂರು : ಜಮ್ಮು ಮತ್ತು ಕಾಶ್ಮೀರದ ಪ್ರಸಿದ್ಧ ಪ್ರವಾಸಿ ತಾಣ ಪಹಲ್ಗಾಮ್ ನಲ್ಲಿ ಉಗ್ರರ ದಾಳಿಯಲ್ಲಿ ಸಂಕಷ್ಟಕ್ಕೆ ಸಿಲುಕಿರುವ ಕನ್ನಡಿಗರ ರಕ್ಷಣೆಗಾಗಿ ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರು ಕಾಶ್ಮೀರಕ್ಕೆ ತೆರಳಿದ್ದಾರೆ.
ಜಮ್ಮು ಕಾಶ್ಮೀರದ ಪಹಲ್ಗಾಮ್ನಲ್ಲಿ ಇಂದು ನಡೆದ ಉಗ್ರರ ದಾಳಿಯಲ್ಲಿ ಮೃತಪಟ್ಟವರ ಸಂಖ್ಯೆ ಕ್ಷಣಕ್ಷಣಕ್ಕೂ ಏರುತ್ತಿರುವುದು ಆತಂಕ ಹೆಚ್ಚಿಸಿದೆ. ದಾಳಿಗೆ ಬಲಿಯಾದ ಅಮಾಯಕ ಜೀವಗಳನ್ನು ನೆನಪಿಸಿಕೊಂಡರೆ ಎದೆ ನಲುಗುತ್ತದೆ.
ಮಡಿದ ಎಲ್ಲರ ಆತ್ಮಕ್ಕೆ ಶಾಂತಿ ಸಿಗಲೆಂದು ಪ್ರಾರ್ಥಿಸುತ್ತೇನೆ. ಭಯೋತ್ಪಾದಕರ ಈ ಹೇಯ ಕೃತ್ಯದಲ್ಲಿ ಪ್ರವಾಸಕ್ಕೆಂದು ತೆರಳಿದ್ದ ಹಲವು ಕನ್ನಡಿಗರು ಕೂಡ ಸಾವನ್ನಪ್ಪಿರುವುದು ಅತ್ಯಂತ ದುಃಖದ ವಿಚಾರ ಎಂದರು.
ಉಗ್ರಕೃತ್ಯದಿಂದಾಗಿ ದೂರದ ಕಾಶ್ಮೀರದಲ್ಲಿ ಸಂಕಷ್ಟಕ್ಕೆ ಸಿಲುಕಿರುವ ಕನ್ನಡಿಗರ ರಕ್ಷಣೆಗಾಗಿ ರಾಜ್ಯದ ಅಧಿಕಾರಿಗಳ ತಂಡವನ್ನು ಸಂಜೆಯೇ ರವಾನಿಸಲಾಗಿದೆ. ಈ ಸಂದರ್ಭದಲ್ಲಿ ನಮ್ಮ ಸರ್ಕಾರದಿಂದ ಹೆಚ್ಚಿನ ನೆರವಿನ ಅಗತ್ಯ ಇದೆ ಎನ್ನುವುದನ್ನು ಅರಿತು ಕಾರ್ಮಿಕ ಸಚಿವರಾದ ಸಂತೋಷ್ ಲಾಡ್ ಅವರಿಗೆ ಕಾಶ್ಮೀರಕ್ಕೆ ತೆರಳಿ ಇಡೀ ಕಾರ್ಯಾಚರಣೆಯ ಮೇಲ್ವಿಚಾರಣೆ ವಹಿಸುವಂತೆ ಸೂಚನೆ ನೀಡಿದ್ದೇನೆ ಎಂದು ತಿಳಿಸಿದ್ದರೆ.