ಬೆಂಗಳೂರು : ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದ ಜಾಮೀನು ಮತ್ತು ನಿರೀಕ್ಷಣಾ ಜಾಮೀನು ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ ಆಗಸ್ಟ್ 29ಕ್ಕೆ ಮುಂದೂಡಿತು.
ಹಾಸನ ಜಿಲ್ಲೆಯ ಹೊಳೆನರಸೀಪುರ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣದಲ್ಲಿ ಜಾಮೀನು ಕೋರಿರುವ ಮತ್ತು ಬೆಂಗಳೂರು ಸೈಬರ್ ಅಪರಾಧ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ಕೋರಿ ಪ್ರಜ್ವಲ್ ಸಲ್ಲಿಸಿರುವ ಅರ್ಜಿಗಳ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ನ್ಯಾಯಪೀಠಕ್ಕೆ ಸರ್ಕಾರ ಕಾಲಾವಕಾಶ ಕೋರಿತು.
ವಿಚಾರಣೆ ವೇಖೆ ವಿಶೇಷ ತನಿಖಾ ದಳದ (ಎಸ್ಐಟಿ) ವಿಶೇಷ ಸರ್ಕಾರಿ ಅಭಿಯೋಜಕರಾದ ಹಿರಿಯ ವಕೀಲ ಪ್ರೊ.ರವಿವರ್ಮ ಕುಮಾರ್, ಅರ್ಜಿ ಸಂಬಂಧ ಆಕ್ಷೇಪಣೆ ಸಲ್ಲಿಸಲು ಎರಡು ವಾರ ಕಾಲಾವಕಾಶ ನೀಡಬೇಕು ಎಂದು ಕೋರಿದರು.
ಅರ್ಜಿದಾರರ ಪರವಾಗಿ ಹಾಜರಾಗಿದ್ದ ವಕೀಲ ಜಿ.ಅರುಣ್, ಎಸ್ಐಟಿಯು ಸಂಬಂಧಿತ ನ್ಯಾಯಾಲಯಕ್ಕೆ ಆರೋಪ ಪಟ್ಟಿ ಸಲ್ಲಿಸಿದೆ. ನಮಗೆ ಇನ್ನೂ ಸರ್ಟಿಫೈಡ್ ಆರೋಪ ಪಟ್ಟಿ ಸಿಕ್ಕಿಲ್ಲ. ಹೀಗಾಗಿ, ವಿಚಾರಣೆ ಮುಂದೂಡಬೇಕು ಎಂದರು. ಇದಕ್ಕೆ ಸಹಮತ ವ್ಯಕ್ತಪಡಿಸಿದ ನ್ಯಾಯಪೀಠ, ವಿಚಾರಣೆಯನ್ನು ಆಗಸ್ಟ್ 29ಕ್ಕೆ ಮುಂದೂಡಿತು.