ಬೆಂಗಳೂರು: ಕನ್ನಡದ ಖ್ಯಾತ ಹಿರಿಯ ಪತ್ರಕರ್ತ ದಿವಂಗತ ಪಿ.ಲಂಕೇಶ್ ಅವರ ಪತ್ನಿ ಇಂದಿರಾ ಲಂಕೇಶ್ (83) ಅವರು ಇಂದು ಬೆಳಿಗ್ಗೆ ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ.
ಇಂದಿರಾ ಲಂಕೇಶ್ ಅವರು ಪ್ರಗತಿಪರ ಚಿಂತಕಿ, ದಿವಂಗತ ಪತ್ರಕರ್ತೆ ಗೌರಿ ಲಂಕೇಶ್, ಖ್ಯಾತ ಚಲನಚಿತ್ರ ನಿರ್ದೇಶಕಿ ಕವಿತಾ ಲಂಕೇಶ್ ಹಾಗೂ ಚಲನಚಿತ್ರ ನಟ-ನಿರ್ದೇಶಕ ಇಂದ್ರಜಿತ್ ಲಂಕೇಶ್ ಅವರ ತಾಯಿಯಾಗಿದ್ದಾರೆ.
ಸದ್ಯ ಇಂದಿರಾ ಲಂಕೇಶ್ ಅವರ ಪಾರ್ಥಿವ ಶರೀರವನ್ನು ಕವಿತಾ ಲಂಕೇಶ್ ಅವರ ನಿವಾಸದಲ್ಲಿ ಸಾರ್ವಜನಿಕರ ದರ್ಶನಕ್ಕಾಗಿ ಇರಿಸಲಾಗಿದ್ದು, ನಾಳೆ (ಮಂಗಳವಾರ) ಅಂತ್ಯಸಂಸ್ಕಾರ ನೆರವೇರಲಿದೆ ಎಂದು ಕುಟುಂಬದ ಆಪ್ತ ಮೂಲಗಳು ತಿಳಿಸಿವೆ. ಇಂದಿರಾ ಲಂಕೇಶ್ ಅವರ ನಿಧನಕ್ಕೆ ಸಾಹಿತ್ಯ, ಪತ್ರಿಕೋದ್ಯಮ ಹಾಗೂ ಚಿತ್ರರಂಗದ ಗಣ್ಯರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ಮಾಜಿ ಸಿಎಂ ಸಿದ್ದರಾಮಯ್ಯ ಸಂತಾಪ
ಇಂದಿರಾ ಲಂಕೇಶ್ ನಿಧನಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದು, ಪ್ರಸಿದ್ಧ ಸಾಹಿತಿ ಮತ್ತು ಪತ್ರಕರ್ತರಾಗಿದ್ದ ದಿವಂಗತ ಪಿ.ಲಂಕೇಶ್ ಅವರ ಪತ್ನಿ ಇಂದಿರಾ ಲಂಕೇಶ್ ಅವರ ನಿಧನದ ಸುದ್ದಿ ಕೇಳಿ ದು:ಖವಾಯಿತು. ಸಾಹಿತ್ಯ, ಮಾಧ್ಯಮ ಮತ್ತು ಸಿನೆಮಾ ಕ್ಷೇತ್ರಗಳಲ್ಲಿ ಲಂಕೇಶ್ ಅವರು ಮಾಡಿರುವ ಸಾಧನೆಯಲ್ಲಿ ಅವರಿಗೆ ಬೆಂಬಲವಾಗಿ ನಿಂತಿದ್ದ ಇಂದಿರಾ ಲಂಕೇಶ್ ಅವರ ಬಹುದೊಡ್ಡ ಕೊಡುಗೆ ಇದೆ ಎನ್ನುವುದು ನಿಸ್ಸಂಶಯ.
ಪ್ರಾರಂಭದ ದಿನಗಳಿಂದಲೂ ಲಂಕೇಶ್ ಅವರ ಕುಟುಂಬದ ಸ್ನೇಹವಲಯದಲ್ಲಿದ್ದ ನನಗೆ ಇಂದಿರಾ ಲಂಕೇಶ್ ಮತ್ತು ಅವರ ಮಕ್ಕಳು ಆತ್ಮೀಯರು. ಸ್ವತ: ಬರವಣಿಗೆಯನ್ನೂ ಮಾಡುತ್ತಿದ್ದ ಇಂದಿರಾ ಲಂಕೇಶ್, ಪುಸ್ತಕ ಪ್ರಕಟಣೆಯ ಜವಾಬ್ದಾರಿಯನ್ನೂ ನಿರ್ವಹಿಸುತ್ತಿದ್ದರು. ಕೆಲವು ವರ್ಷಗಳ ಹಿಂದೆಯಷ್ಟೆ ನಡೆದ ಗೌರಿ ಲಂಕೇಶ್ ಹತ್ಯೆಯ ನಂತರ ಆಘಾತಕ್ಕೀಡಾಗಿದ್ದ ಇಂದಿರಾ ಅವರು ಪೂರ್ಣವಾಗಿ ಚೇತರಿಸಿಕೊಂಡಿರಲಿಲ್ಲ.ಇಂದಿರಾ ಲಂಕೇಶ್ ಕುಟುಂಬದ ದು:ಖದಲ್ಲಿ ನಾನೂ ಭಾಗಿಯಾಗಿದ್ದೇನೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಹಾರೈಸುತ್ತೇನೆ ಎಂದು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.
ಪ್ರಸಿದ್ಧ ಸಾಹಿತಿ ಮತ್ತು ಪತ್ರಕರ್ತರಾಗಿದ್ದ ದಿವಂಗತ ಪಿ.ಲಂಕೇಶ್ ಅವರ ಪತ್ನಿ ಇಂದಿರಾ ಲಂಕೇಶ್ ಅವರ ನಿಧನದ ಸುದ್ದಿ ಕೇಳಿ ದು:ಖವಾಯಿತು. ಸಾಹಿತ್ಯ, ಮಾಧ್ಯಮ ಮತ್ತು ಸಿನೆಮಾ ಕ್ಷೇತ್ರಗಳಲ್ಲಿ ಲಂಕೇಶ್ ಅವರು ಮಾಡಿರುವ ಸಾಧನೆಯಲ್ಲಿ ಅವರಿಗೆ ಬೆಂಬಲವಾಗಿ ನಿಂತಿದ್ದ ಇಂದಿರಾ ಲಂಕೇಶ್ ಅವರ ಬಹುದೊಡ್ಡ ಕೊಡುಗೆ ಇದೆ ಎನ್ನುವುದು ನಿಸ್ಸಂಶಯ.
ಪ್ರಾರಂಭದ… pic.twitter.com/iEoZ0JlrJy
— Siddaramaiah (@siddaramaiah) June 15, 2026








