ಬೆಂಗಳೂರು: ಸಕಲ ಸರ್ಕಾರಿ ಗೌರವಗಳೊಂದಿಗೆ ವೃಕ್ಷಮಾತೆ ಸಾಲುಮರದ ತಿಮ್ಮಕ್ಕ ಅವರ ಪಾರ್ಥೀವ ಶರೀರದ ಅಂತ್ಯಕ್ರಿಯೆಗೆ ರಾಜ್ಯ ಸರ್ಕಾರವು ಆದೇಶ ಹೊರಡಿಸಿದೆ.
ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಶನಿವಾರ ಬೆಳಗ್ಗೆ 7.30ರಿಂದ 10.30ರವರೆಗೆ ತಿಮ್ಮಕ್ಕ ಪಾರ್ಥಿವ ಶರೀರ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಮಲ್ಲತ್ತಹಳ್ಳಿ ಕಲಾಗ್ರಾಮದಲ್ಲಿ ಮಧ್ಯಾಹ್ನ 12ಕ್ಕೆ ಅಂತ್ಯಕ್ರಿಯೆ ನಡೆಯಲಿದೆ ಎಂದು ಅರಣ್ಯ ಸಚಿವ ಈಶ್ವರ ಖಂಡ್ರೆ ಹೇಳಿದ್ದಾರೆ.
ಈ ಕುರಿತಂತೆ ಆಡಳಿತ ಮತ್ತು ಸಿಬ್ಬಂದಿ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಅಧಿಸೂಚನೆ ಹೊರಡಿಸಿದ್ದು, ವೃಕ್ಷಮಾತೆ ನಾಡೋಜ, ಪದ್ಮಶ್ರೀ ಪುರಸ್ಕೃತರು ಹಾಗೂ ಕರ್ನಾಟಕದ ಪರಿಸರ ರಾಯಭಾರಿ ಡಾ.ಸಾಲುಮರದ ತಿಮ್ಮಕ್ಕ ಅವರು ದಿನಾಂಕ 14-11-2025ರಂದು ನಿಧನರಾಗಿರುತ್ತಾರೆ. ಅವರ ನಿಧನಕ್ಕೆ ಸರ್ಕಾರವು ತೀವ್ರ ಸಂತಾಪವನ್ನು ವ್ಯಕ್ತಪಡಿಸುತ್ತದೆ ಎಂದಿದ್ದಾರೆ.
ಮೃತರ ಗೌರವಾರ್ಥ ಅಂತ್ಯಕ್ರಿಯೆಯನ್ನು ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿಸಲು ರಾಜ್ಯ ಸರ್ಕಾರವು ಆದೇಶಿಸಿದೆ.









