ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆ ನಡೆದಿದ್ದು, ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ಕಾನೂನು ಕ್ರಮ ಜರುಗಿಸಲು ಅನುಮತಿ ನೀಡುವ ಪ್ರಾಸಿಕ್ಯೂಷನ್ ಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಸಹಿ ಹಾಕಿದ್ದಾರೆ.
ಈ ಬಗ್ಗೆ ಡಿಸಿಎಂ ಡಿ.ಕೆ.ಶಿವಕುಮಾರ್ ಸುದ್ದಿಗೋಷ್ಠಿ ನಡೆಸಿದ್ದು, ಮುಡಾ ಹಗರಣ ಸಂಬಂಧ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ್ದಾರೆ. 1.08,2024 ರಲ್ಲಿ ನನ್ನ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ದಾಖಲೆಗಳನ್ನು ಬಿಡುಗಡೆ ಮಾಡಿದ್ದೇವೆ ಎಂದರು.
ನಾವು ಕಾನೂನು ಚೌಕಟ್ಟಿನಲ್ಲಿ ಗಮನದಲ್ಲಿಟ್ಟುಕೊಂಡು ಚರ್ಚೆ ಮಾಡಿದ್ದೇವೆ. ಪ್ರಾಸಿಕ್ಯೂಷನ್ ರಾಜಕೀಯ ಪ್ರೇರಿತವಾಗಿದೆ. ರಾಜ್ಯಪಾಲರು ಸಂವಿಧಾನ ವಿರೋಧಿ ಪತ್ರ ಕೊಟ್ಟಿದ್ದಾರೆ. ಇದು ಪ್ರಜಾಪ್ರಭುತ್ವಕ್ಕೆ ಮಾರಕವಾಗಿದೆ ಎಂದು ಹೇಳಿದ್ದಾರೆ.
ಶೋಕಾಸ್ ನೋಟಿಸ್ ಗೆ ಈಗಾಗಲೇ ಉತ್ತರ ನೀಡಲಾಗಿತ್ತು. ಇಂದು ನೇರವಾಗಿ ರಾಜ್ಯಪಾಲರು ಸಿಎಂ ಸಿದ್ದರಾಮಯ್ಯಗೆ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡುವ ಪತ್ರ ಕಳುಹಿಸಿದ್ದಾರೆ. ಇದಕ್ಕೆ ಕಾನೂನಿನ ಮೂಲಕವೇ ಉತ್ತರ ಕೊಡುತ್ತೇವೆ. ಸರ್ಕಾರ ಇಂಥ ಹಗರಣದಲ್ಲಿ ಭಾಗಿಯಾಗಿಲ್ಲ ಎಂದು ರಾಜ್ಯಪಾಲರಿಗೆ ತಿಳಿಸಿದ್ದೇವೆ ಎಂದು ಹೇಳಿದರು.
ರಾಜ್ಯಪಾಲರ ಹುದ್ದೆಗಳ ಬಹಳ ಗೌರವ ಇದೆ. ಇಡೀ ರಾಜ್ಯ ಸರ್ಕಾರ ರಾಜ್ಯಪಾಲರ ಮಾರ್ಗದರ್ಶನದಲ್ಲಿ ನಡೆಯುತ್ತದೆ. ಪ್ರಾಸಿಕ್ಯೂಷನ್ ಗಾಗಲಿ, ಆರೋಪಗಳಿಗಾಗಿ ಮೊದಲು ತನಿಖೆಯಾಗಬೇಕು. ಬಳಿಕ ಪ್ರಾಸಿಕ್ಯೂಷನ್ ಕೊಡಬೇಕು ಎಂದರು.
ಯಡಿಯೂರಪ್ಪ, ಜನಾರ್ದನ ರೆಡ್ಡಿ, ಮುರುಗೇಶ್ ನಿರಾಣಿ ಶಶಿಕಲಾ ಜೊಲ್ಲೆ ಬಿಜೆಪಿಯ ನಾಯಕರು ವಿರುದ್ದ ಪ್ರಾಸಿಕ್ಯೂಷನ್ ಗೆ ಅನುಮತಿ ಕೇಳಲಾಗಿತ್ತು. ಆದರೆ ರಾಜ್ಯಪಾಲರು ಇದುವರೆಗೂ ಯಾವುದೇ ತೀರ್ಮಾನ ಕೈಗೊಂಡಿಲ್ಲ ಎಂದು ಹೇಳಿದ್ದಾರೆ.
ಸಿಎಂ ಸಿದ್ದರಾಮಯ್ಯ ವಿರುದ್ಧ ಇದೀಗ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ಕೊಟ್ಟಿದ್ದಾರೆ. ಹೀಗಾಗಿ ನಾವು ಕಾನೂನು ಹೋರಾಟಕ್ಕೆ ಮುಂದಾಗುತ್ತೇವೆ. ಇಡೀ ದೇಶದಲ್ಲೇ ಹಿಂದುಳಿದ ನಾಯಕರಾದ ಸಿದ್ದರಾಮಯ್ಯ ಸಿಎಂ ಆಗಿರುವುದಕ್ಕೆ ಕೇಂದ್ರ ಬಿಜೆಪಿ ಪಿತೂರಿ ನಡೆಸುತ್ತಿದೆ ಎಂದು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.